ಡೈಲಿ ವಾರ್ತೆ: 01/DEC/2023
ಬೆಂಗಳೂರು ಹುಸಿ ಬಾಂಬ್ ಬೆದರಿಕೆ ಪ್ರಕರಣ: ಶಾಲೆಗಳು, ದೇವಸ್ಥಾನಗಳಿಗೆ ಭದ್ರತೆ ಒದಗಿಸುತ್ತೇವೆ – ಸಿಎಂ
ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಿನ್ನೆಲೆ ಪೊಲೀಸ್ ಅಧಿಕಾರಿಗಳು ಸೇರಿದಂತೆ ರಾಜಕೀಯ ನಾಯಕರೂ ಫುಲ್ ಅಲರ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ದೇವಸ್ಥಾನಗಳಿಗೂ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸೂಕ್ತ ತನಿಖೆಗೆ ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ 7 ಶಾಲೆಗಳಿಗೆ ಹುಸಿ ಬಾಂಬ್ ಕರೆ ಹೆಬ್ಬಗೋಡಿಯ ಪೊಲೀಸ್ ಠಾಣಾ ವ್ಯಾಪ್ತಿಯ 4 ಶಾಲೆಗಳು ಸರ್ಜಾಪುರದ ಸರ್ಜಾಪುರ ಪೊಲೀಸ್ ಠಾಣೆ 5 ಶಾಲೆಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ಈ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ ಜನರಿಗೆ ಸುರಕ್ಷಿತ ವಾತಾವರಣ, ನೆಮ್ಮದಿಯ ಬದುಕು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ವಂಸಕ ಕೃತ್ಯದ ಬೆದರಿಕೆ ಒಡ್ಡಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು, ಸಾರ್ವಜನಿಕರ ನೆಮ್ಮದಿ ಕದಡುವುದು ಇಂತಹಾ ಯಾವುದೇ ದುಷ್ಟ ಆಲೋಚನೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಘಟನೆಯ ಹಿಂದಿರುವ ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.