ಡೈಲಿ ವಾರ್ತೆ: 12/DEC/2023

ರಾಜಭವನಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ – ಆರೋಪಿಯ ಬೆನ್ನು ಬಿದ್ದ ಪೊಲೀಸರು

ಬೆಂಗಳೂರು: ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ರಾತ್ರಿ 11:30ರ ವೇಳೆಗೆ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಿದ್ದಾರೆ.

ಪೊಲೀಸ್ ಕಂಟ್ರೋಲ್ ರೂಮ್‌ಗೆ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಕಿಡಿಗೇಡಿಗಳು ಎನ್‌ಐಎ (NIA) ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾರೆ. ಎನ್‌ಐಎ ಅಧಿಕಾರಿಗಳಿಗೆ ಕರೆ ಮಾಡಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆ ಎನ್‌ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ಕೇಂದ್ರ ವಿಭಾಗದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.