ಡೈಲಿ ವಾರ್ತೆ: 19/DEC/2023

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಬರ ಪರಿಸ್ಥಿತಿ ಬಗ್ಗೆ ಚರ್ಚೆ

ದೆಹಲಿ: ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಅವರ ಜೊತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯಾದ ನಂತರ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗುತ್ತಿರುವ ಎರಡನೇ ಭೇಟಿ ಇದಾಗಿದೆ.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಟೀಕಿಸಿದ್ದರು. ಜೊತೆಗೆ ನಮ್ಮ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಸದ್ಯ ಪ್ರಧಾನಿಯವರು ಸಿಎಂ ಸಿದ್ದರಾಮಯ್ಯರಿಗೆ ಭೇಟಿಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಮೋದಿಯವರನ್ನು ಭೇಟಿ ಮಾಡಿ ಬರದ ಬಗ್ಗೆ ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.

ಇನ್ನು ಮತ್ತೊಂದೆಡೆ ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಇದ್ದು ಅದರಲ್ಲೂ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹೈಕಮಾಂಡ್ ನಾಯಕರ ಜೊತೆ ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ವರಿಷ್ಠರ ಜೊತೆ ನಿಗಮ, ಮಂಡಳಿ ಬಗ್ಗೆಯೂ ಚರ್ಚೆ ಮಾಡಲಿದ್ದಾರೆ.