ಡೈಲಿ ವಾರ್ತೆ: 25/DEC/2023

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿ ಕೋಟ ಶ್ರೀನಿವಾಸ್‌ ಪೂಜಾರಿ ನೇಮಕ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ವಿಪಕ್ಷ ನಾಯಕನಾಗಿ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಪಕ್ಷ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ ಆದೇಶದಂತೆ ವಿಧಾನ ಪರಿಷತ್‌ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೊರಡಿಸಿರುವ ಪ್ರಕಟಣೆ ತಿಳಿಸಿದೆ.

ಕೋಟ ಶ್ರೀನಿವಾಸ ಪೂಜಾರಿ ಅವರು ಎರಡನೇ ಭಾರಿ ವಿಧಾನ ಪರಿಷತ್‌ನ ವಿಪಕ್ಷ ನಾಯಕನಾಗಿ ಆಯ್ಕೆಯಾಗುತ್ತಿದ್ದಾರೆ. ಈ ಹಿಂದೆ 2018ರಲ್ಲಿ ವಿಧಾನ ಪರಿಷತ್‌ನ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದರು.

ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ಸಹ ನೇಮಕ ಮಾಡಲಾಗಿದೆ. ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಲಾಗಿದೆ. ಅಲ್ಲದೆ ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್‌ನ ಮುಖ್ಯ ಸಚೇತಕರಾಗಿ ಎನ್. ರವಿಕುಮಾರ್ ಅವರನ್ನು ನೇಮಿಸಲಾಗಿದೆ.