ಡೈಲಿ ವಾರ್ತೆ: 31/DEC/2023
ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲಾಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ನಿಷೇಧ
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯವಾಗಿ ನಿಷೇಧಿಸಿದೆ.
ಅದೇ ರೀತಿ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿಯೂ ಇಂತಹ ಯಾವುದೇ ಪ್ರಕರಣ ಘಟಿಸದಂತೆ ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯಸ್ಥರು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.
ರಾಜ್ಯದ ಹಲವು ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಶುಚಿಗೊಳಿಸುತ್ತಿರುವ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಈ ಬಗ್ಗೆ ನಿಯಮ ರೂಪಿಸಿದೆ.
ಒಂದು ವೇಳೆ ನಿಯಮ ಮೀರಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಿಬಂದಿ ವಿರುದ್ದ ಎಫ್ಐಆರ್ ದಾಖಲಿಸಲಾಗುವುದು ಮತ್ತು ಶಿಸ್ತುಕ್ರಮ ಕೈಗೊಳ್ಳ ಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.