ಡೈಲಿ ವಾರ್ತೆ: 03/JAN/2024

ಹುಬ್ಬಳ್ಳಿ: ಶ್ರೀಕಾಂತ್ ಪೂಜಾರ ಬಂಧನ ವಿರೋಧಿಸಿ ಹುಬ್ಬಳ್ಳಿ ನಗರ ಪೊಲೀಸ್ ಠಾಣೆ ಎದುರು ಬಿಜೆಪಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಮೂರು ದಶಕ ಹಿಂದೆ ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರಿ ಬಂಧನ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಗಿದೆ.
ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆ ಎದುರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಪೂರ್ವಾಹ್ನ 11ರ ಸುಮಾರಿಗೆ ಪ್ರತಿಭಟನೆ ಶುರುಮಾಡಿದ್ದಾರೆ. ಸಂಜೆ 4 ಗಂಟೆ ತನಕ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್‌ ಪ್ರತಿಭಟನಾ ಸ್ಥಳದಲ್ಲಿದ್ದು, ಅವರ ನೇತೃತ್ವದಲ್ಲೇ ಪ್ರತಿಭಟನೆ ನಡೆದಿದೆ. ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಪರಿಸ್ಥಿತಿ ಕೈಮೀರಿ ಹೋಗದಂತೆ ನಿಗಾವಹಿಸಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಮಂದಿರ ಉದ್ಘಾಟನೆಗೆ ಸಿದ್ಧವಾಗುತ್ತಿರುವಾಗಲೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ದಶಕಗಳ ಹಳೆಯ ಕೇಸ್‌ಗಳನ್ನು ಕೆದಕಿ ಬಂಧಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಭಜನೆ ಮಾಡುತ್ತ, ಶ್ರೀರಾಮ ದೇವರಿಗೆ ಜೈಕಾರ ಹಾಕುತ್ತ ಪ್ರತಿಭಟನೆ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನಾ ಸ್ಥಳದಲ್ಲಿ ಆರ್. ಅಶೋಕ್ ಅವರ ಜತೆಗೆ ಶಾಸಕರಾದ ಅರವಿಂದ ಬೆಲ್ಲದ್‌, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ್‌, ಎಂಎಲ್‌ಸಿ ಪ್ರದೀಪ್ ಶೆಟ್ಟರ ಸೇರಿ ಅನೇಕ ನಾಯಕರು ಭಾಗಿಯಾಗಿದ್ದಾರೆ.
ಬಿಜೆಪಿಯವರ ಪ್ರತಿಭಟನೆ ಕಾರಣ ಇಂದು (ಜ.3) ಬ್ರಾಡ್‌ವೇ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಪೊಲೀಸ್ ಠಾಣೆಗೆ ಯಾರೂ ನುಗ್ಗದಂತೆ ವಾಹನಗಳನ್ನು ಅಡ್ಡ ನಿಲ್ಲಿಸಿದ್ದಾರೆ. ಸ್ಥಳದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲ್ಪಟ್ಟಿದ್ದಾರೆ.