ಡೈಲಿ ವಾರ್ತೆ: 19/Jan/2024
ಆನೇಕಲ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ: 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ
ಆನೇಕಲ್: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಸೆಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ.
ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.