ಡೈಲಿ ವಾರ್ತೆ: 04/Mar/2024
ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್, ಭಜರಂಗದಳ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ
ಬಂಟ್ವಾಳ : ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್, ಭಜರಂಗದಳ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ಪ್ರತಿಭಟನೆ ನಡೆದು ಬಳಿಕ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಮಾತನಾಡಿ , ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ ಮಾಡುತ್ತಿದೆ, ಬಿಜೆಪಿ ಸರಕಾರ ಜಾರಿಗೆ ತಂದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ಪಡೆದುಕೊಂಡು ನಿರಂತರವಾಗಿ ಗಲಬೆ ನಡೆಯಲು ಕಾರಣವಾಗಿದೆ, ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರಿಗೆ ಅಪಮಾನ ಮಾಡಿದ ಕಾಂಗ್ರೆಸ್ ಬಳಿಕ ಶಾಲಾ ಪಾಠ ಪುಸ್ತಕಗಳಲ್ಲಿ ಇದ್ದ ರಾಷ್ಟ್ರೀಯತೆಯ ವಿಚಾರಗಳನ್ನು ತೆಗೆದುಹಾಕಿದೆ, ಎಂದು ಆರೋಪ ಮಾಡಿದರು.
ಮಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಕಾಂಗ್ರೆಸ್ ನಾಯಕರೋರ್ವರು ಬ್ರದರ್ಸ್ ಎಂದು ಹೇಳಿಕೊಂಡ ಪರಿಣಾಮವಾಗಿ ಅವರು ಇಂದು ಮತ್ತೆ ಬೆಂಗಳೂರು ನಗರದಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದರು, ವಿಧಾನ ಸೌಧದೊಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದು ಸರಕಾರದ ಧೋರಣೆ ಸಾರ್ವಜನಿಕರನ್ನು ತಲೆತಗ್ಗಿಸುವಂತೆ ಮಾಡಿದೆ ಎಂದು ಹೇಳಿದರು.
ಇವರ ಹಿಂದೂ ವಿರೋಧಿ ನೀತಿಯಿಂದ ಪೋಲೀಸರು ದೇಶದ್ರೋಹಿಗಳ ಹಿಂದೆ ಬೀಳದೆ, ದೇಶದ ರಕ್ಷಣೆಗೆ ಪಣತೊಟ್ಟ ಹಿಂದೂ ಕಾರ್ಯಕರ್ತರ ಮನೆಗೆ ಮಧ್ಯ ರಾತ್ರಿ ವೇಳೆ ನುಗ್ಗುತ್ತಾರೆ, ಹಿಂದೂ ಕಾರ್ಯಕರ್ತರ ಮೇಲೆ ಗೂಂಡ ಕಾಯ್ದೆಯನ್ನು ಹಾಕಲಾಗುತ್ತದೆ ಇದು ಬೇಸರದ ಸಂಗತಿ ಎಂದು ಹೇಳಿದರು.
ವಿಶ್ವಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ| ಪ್ರಸನ್ನ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಪೋಲೀಸರು ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ರಾಷ್ಟ್ರೀಯ ವಿಚಾರದಲ್ಲಿ ಸಮಾಜದ ಹಿತದೃಷ್ಟಿಯಿಂದ ಹೋರಾಟ ಮಾಡುವ ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡ ಕಾಯ್ದೆ ಹಾಕಿ ಬೆದರಿಸುವ ಕಾರ್ಯ ನಡೆಯುತ್ತಿರುವುದನ್ನು ಸಮಾಜ ಸಹಿಸುವುದಿಲ್ಲ ಎಂದರು .
ಜಿಲ್ಲಾ ಸಂಚಾಲಕ ಭರತ್ ಕುಮ್ಡೆಲು , ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯಾ, ಸಹ ಸಂಚಾಲಕರಾದ ಗುರುರಾಜ್ ಬಂಟ್ವಾಳ, ಸಂತೋಷ್ ಸರಪಾಡಿ, ಶಿವ ಪ್ರಸಾದ ತುಂಬೆ, ಸಚಿನ್ ಮೆಲ್ಕಾರ್, ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ಎ.ಗೋವಿಂದ ಪ್ರಭು, ಕಿಶೋರ್ ಕುಮಾರ್ ಬೊಟ್ಯಾಡಿ, ದೇವದಾಸ್ ಶೆಟ್ಟಿ, ರಾಮ್ ದಾಸ ಬಂಟ್ವಾಳ, ಚೆನ್ನಪ್ಪ ಆರ್ ಕೋಟ್ಯಾನ್, ದಿನೇಶ್ ಅಮ್ಟೂರು ಮತ್ತಿತರರು
ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.