ಡೈಲಿ ವಾರ್ತೆ: 08/Mar/2024

– ಕೆ ಸಂತೋಷ್ ಶೆಟ್ಟಿ ಮೊಳಹಳ್ಳಿ ಕುಂದಾಪುರ ಉಡುಪಿ ಜಿಲ್ಲೆ.
(ಪತ್ರಕರ್ತರು ಮಾಧ್ಯಮ ವಿಶ್ಲೇಷಕರು )

” ನಾಡಿನಾದ್ಯಂತ ಶಿವರಾತ್ರಿಯ ಸಂಭ್ರಮ…, ಶಿವನು ಪಾರ್ವತಿ ದೇವಿಯನ್ನ ವಿವಾಹದ ಪ್ರಮುಖ ದಿನ ಜಾಗರಣೆ ಆಚರಣೆ…!” ಸಮುದ್ರ ಮಥನದ ವಿಷ ಕುಡಿದ ಶಿವನಿಗೆ, ಗಂಟಲಲ್ಲಿ ಇಳಿಯದಂತೆ ಪಾರ್ವತಿ ರಾತ್ರಿ ಇಡೀ ವಿಷವನ್ನು ತಡೆದ ದಿನವನ್ನ ಶಿವರಾತ್ರಿಯಾಗಿ ಭೂಲೋಕದಲ್ಲಿ ಆಚರಿಸುವ ಸಂಭ್ರಮ….!”

ಶಿವರಾತ್ರಿಯ ಸಂದರ್ಭದ ವಿಷಯ ಲೇಖನ :-
ನಾಡಿನಾದ್ಯಂತ ಶಿವರಾತ್ರಿಯ ಸಂಭ್ರಮ ಹಾಗೂ ಶಿವನಿಗೆ ಜಾಗರಣೆಯ ಮೂಲಕ ಉಪವಾಸವಿದ್ದು, ಭಕ್ತಿಯಿಂದ ನಮಿಸುವ ಸಾಂಪ್ರದಾಯಿಕವಾಗಿ ನಡೆಸುವ ಶಿವರಾತ್ರಿ ಸಂಭ್ರಮ. ಸಂಭ್ರಮವನ್ನ ಆಚರಿಸುವುದರ ಸಲುವಾಗಿ, ದೇಗುಲದ ಮೂಲಕ ಒಂದಿಷ್ಟು ಭಕ್ತಾಭಿಮಾನಿಗಳು ಶಿವನ ದೇಗುಲದ ಮುಂದೆ ಭಜನೆಗಳನ್ನ ಹೇಳುತ್ತಾ ವಾಕ್ಯಗಳನ್ನ ನುಡಿಯುತ್ತಾ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ಮಾಡುತ್ತಾ ರಾತ್ರಿ ಪೂರ್ತಿ ಜಾಗರಣೆಯ ಮೂಲಕ ಶಿವರಾದನೆಯನ್ನು ಮಾಡುತ್ತಾರೆ. ಇವನಿಗೆ ಬೇಕಾಗುವಂತಹ ವಿಶಿಷ್ಟ ಪ್ರಾಕೃತಿಕ ಪರಂಪರೆಯಲ್ಲಿ ಶಿವನ ಆಲಯ ಮಹತ್ವವನ್ನು ಪಡೆಯುತ್ತದೆ. ಸತ್ಯಮೇವ ಜಯತೆ ಎನ್ನುವಂತೆ, ಸತ್ಯಕ್ಕೆ ವಿಶೇಷವಾದಂತಹ ಆಲಯ ನಿರ್ಮಿಸಿ, ಅಲ್ಲಿಯೇ ಪ್ರತಿಷ್ಠಾಪನೆಗೊಂಡು ಶಿವನು ಐಕ್ಯನಾಗಿದ್ದಾನೆ ಎನ್ನುವ ಪ್ರತಿತಿ ದಂತಕಥೆಯಲ್ಲಿ ಉಲ್ಲೇಖವಾಗಿದೆ. ಧಾರ್ಮಿಕ ಪರಂಪರೆಯಲ್ಲಿ ಉಲ್ಲೇಖವಾಗಿರುವ ಶಿವರಾತ್ರಿಯ ಸಂಭ್ರಮ ಜಗದಗಲ ಪೂಜಿಸುವಂತಹ ಈಶ್ವರ ಪಾರ್ವತಿಗೆ ವಿಶೇಷ ಪೂಜೆಗಳನ್ನು ಮಾಡುವುದರ ಮೂಲಕ ಶಿವನನ್ನ ಆರಾಧಿಸುತ್ತಾರೆ. ಗಂಗಾಧರೇಶ್ವರ, ಮಹಾಲಿಂಗೇಶ್ವರ ಹೀಗೆ ಬೇರೆ, ಬೇರೆ ಹೆಸರುಗಳಿಂದ ಕರೆಯ ಕರೆಯಲ್ಪಡುವ ಶಿವನು ಪ್ರತ್ಯೇಕವಾಗಿ ಕಲ್ಲು ಆಕಾರದಲ್ಲಿ ಐಕ್ಯನಾಗಿದ್ದಾನೆ.

ಹೀಗೆ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಆಚರಣೆಗೂ ಹಿನ್ನೆಲೆಯಿದೆ, ಅನೇಕ ಕಥೆಗಳಿವೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯೆಂದು ಹೇಳಲಾಗುತ್ತದೆ. ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಜತೆಗೆ, ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.ಶಿವರಾತ್ರಿ ಆಚರಣೆಯ ಹಿನ್ನೆಲೆ
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಮಾಘ ಬಹುಳ ಚತುರ್ದಶಿಯ ರಾತ್ರಿಯೇ ಶಿವ ಪಾರ್ವತಿಯನ್ನು ವರಿಸಿದ್ದನಂತೆ. ಹೀಗಾಗಿ ಅಂದು ರಾತ್ರಿ ದೇವಾನು ದೇವತೆಗಳೆಲ್ಲರೂ ಜಾಗರಣೆ ಮಾಡಿ, ಗಿರಿಜಾ ಕಲ್ಯಾಣ ವೀಕ್ಷಿಸಿ, ಶಿವಪಾರ್ವತಿಯರಿಬ್ಬರನ್ನೂ ಪೂಜಿಸಿದರಂತೆ. ಹೀಗಾಗಿಯೇ ಜಾಗರಣೆ ಪದ್ಧತಿ ಆಚರಣೆಗೆ ಬಂದಿದೆ ಎನ್ನಲಾಗುತ್ತದೆ.ಪ್ರತಿ ಸಂವತ್ಸರದಲ್ಲಿ, ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು, ರಾತ್ರಿ ವೇಳೆಯಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಆ ಸಮಯದಲ್ಲಿ ಅಂದ್ರೆ ಶಿವರಾತ್ರಿಯಂದು ರಾತ್ರಿಯ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
ಶಿವರಾತ್ರಿ, ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ.

ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.


ಶಿವಪುರಾಣದಲ್ಲಿ ಶಿವಾರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.

ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.