ಡೈಲಿ ವಾರ್ತೆ: 12/Mar/2024

ಇಂದು ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್ ಸೇರ್ಪಡೆ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಲಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗುವವ ಎಲ್ಲ ಸಾಧ್ಯತೆ ಇದೆ ಎನ್ನಲಾಗಿದೆ.
ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ಸೇರಿ 2012ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಬಳಿಕ ಕಾಂಗ್ರೆಸ್ ಪಕ್ಷ ತ್ಯಜಿಸಿ ಬಿಜೆಪಿಗೆ ಸೇರಿಕೊಂಡಿದ್ದರು. ಬಿಜೆಪಿ ಸರಕಾರ ಇದ್ದಾಗ ಇವರನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಿಸಿತ್ತು. ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅಧ್ಯಯನ ವರದಿಯನ್ನು ಇತ್ತೀಚಿಗಷ್ಟೇ ಸರಕಾರಕ್ಕೆ ಸಲ್ಲಿಸಿದ್ದರು.
ಆಯೋಗದ ಅಧ್ಯಕ್ಷ ಅವಧಿ‌ ಮುಗಿದ ಆನಂತರ ಕಾಂಗ್ರೆಸ್ ಸೇರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದರು.