ಡೈಲಿ ವಾರ್ತೆ: 21/Mar/2024
ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.
ಇನ್ನು ಅರವಿಂದ ಕೇಜ್ರಿವಾಲ್ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ED ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ EDಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.
ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇದರಿಂದಾಗಿ ಅವರಿಗೆ ಅನಪೇಕ್ಷಿತ ಲಾಭಗಳು ಉಂಟಾಗಿವೆ. ಅವರು ಎಎಪಿಗೆ ಕಿಕ್‌ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಹಲವು ಸಲ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳು ಭೇಟಿ ನೀಡಿ ದೆಹಲಿಯ ನಿವಾಸದಲ್ಲಿ ಶೋಧ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಜ್ರಿವಾಲ್ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ಮಾಡಿದ್ದು, ಕೇಜ್ರಿವಾಲ್ ಸೇರಿದಂತೆ ಸಂಬಂಧಿಕರ ಮೊಬೈಲ್ ವಶಕ್ಕೆ ಪಡೆದುಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಹೇಳಿಕೆಯನ್ನು ಇಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.
ಇತ್ತ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ನಡೆಯುತ್ತಿರುವ ವೇಳೆ ನಿವಾಸದ ಬಳಿ ಬೆಂಬಲಿಗರು ಜಮಾಯಿಸಿದ್ದರು. ಇಡಿ ಅಧಿಕಾರಿಗಳ ವಿರುದ್ಧ ಬೆಂಬಲಿಗರಿಂದ ಪ್ರತಿಭಟನೆ ಮಾಡಿದ್ದರು. ಮುನ್ನೆಚ್ಚರಿಕೆಯಿಂದ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಅರವಿಂದ ಕೇಜ್ರಿವಾಲ್ ನಿವಾಸದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.