ಡೈಲಿ ವಾರ್ತೆ: 24/Mar/2024

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿಯಿಂದ ರಾಜ್ಯ ಚುನಾವಣಾ ಆಯೋಗಕ್ಕೆ ದೂರು!

ಉಡುಪಿ: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಬಿಜೆಪಿ ನಿಯೋಗ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಎರಡು ವಿಚಾರವಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ದೂರು ನೀಡಿದೆ.

ಶಾಸಕರನ್ನ ಸೆಳೆಯೋದಕ್ಕೆ ಬಿಜೆಪಿ 50 ಕೋಟಿ ಆಫರ್‌ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ ಅನ್ನೋ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್‌ಮೀನಾ ಅವರಿಗೆ ದೂರು ನೀಡಲಾಗಿದೆ.

ಬಿಜೆಪಿಯಿಂದ ಒಬ್ಬ ಶಾಸಕರಿಗೆ ₹50 ಕೋಟಿ ಆಫರ್
ಬಿಜೆಪಿಯವರು ಒಬ್ಬ ಶಾಸಕನಿಗೆ ₹50 ಕೋಟಿ ಆಫರ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಚುನಾವಣಾ ಖರ್ಚು ನಾವೇ ನೋಡಿಕೊಳ್ತೀವಿ ಅಂತಿದ್ದಾರೆ. ಸೋಲಿನ ಭಯದಿಂದ ಕಾಂಗ್ರೆಸ್ ಖಾತೆ ಸೀಜ್ ಮಾಡಿದ್ದಾರೆ. ಕಾಂಗ್ರೆಸ್ನವರು 1 ರೂಪಾಯಿ ಬಳಸದಂತೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಇನ್ನು ಮತ್ತೊಂದೆಡೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ಹೇಳಿಕೆ ನೀಡಿದ್ದರು. ಬಿಜೆಪಿ ಅಭ್ಯರ್ಥಿ ಕೋಟಗೆ ಹಿಂದಿ, ಇಂಗ್ಲಿಷ್ ಬರೋಲ್ಲ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧವಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.