ಡೈಲಿ ವಾರ್ತೆ: 28/Mar/2024
ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ. 3 ರಂದು ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಎ.3 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ ಅವರು, ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ಕಚೇರಿ ಬಳಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಅದು ಮುಗಿದ ಬಳಿಕ ಕೋಟ ಅವರು ಮೆರವಣಿಗೆಯಲ್ಲಿ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೆ ಪೂರಕವಾಗಿ ಬಿಜೆಪಿ ಉಡುಪಿ ಜಿಲ್ಲಾ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಂಡಿದೆ. ಕುಂದಾಪುರ ಸಮಾವೇಶವು ಮಾ.29ರಂದು ಸಂಜೆ 4ಗಂಟೆಗೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ, ಕಾಪು ಸಮಾವೇಶ ಮಾ.30ರ ಸಂಜೆ 4ಗಂಟೆಗೆ ಹೊಟೇಲ್ ಕೆಒನ್ ಹಾಲ್‌ನಲ್ಲಿ, ಉಡುಪಿ ಸಮಾವೇಶ ಎ.3 ರಂದು 10:30ಕ್ಕೆ ಹಾಗೂ ಕಾರ್ಕಳ ಸಮಾವೇಶ ಎ.5 ರ ಬೆಳಿಗ್ಗೆ 10:30ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿರುವುದು.