ಡೈಲಿ ವಾರ್ತೆ: 16/April/2024
ಸ್ಯಾಂಡಲ್‌ವುಡ್ ಹಿರಿಯ ನಟ
ಕಳ್ಳ ಕುಳ್ಳ ಖ್ಯಾತಿಯ ದ್ವಾರಕೀಶ್ ನಿಧನ
ಬೆಂಗಳೂರು: ಸ್ಯಾಂಡಲ್‌ವುಡ್ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19ರಂದು ಜನಿಸಿದ ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ ಮತ್ತು ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ , ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಡಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದರು. ಆದರೆ 1963ರಲ್ಲಿ ವ್ಯಾಪಾರ ಬಿಟ್ಟು ಬಣ್ಣದ ಬದುಕಿಗೆ ಕಾಲಿಟ್ಟರು.
1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಿಗೆ ಬಣ್ಣ ಹಚ್ಚಿದ್ದಾರೆ. ದಿವಂಗತ ನಟ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಎಂದೇ ಪ್ರಸಿದ್ಧವಾಗಿತ್ತು. ಇವರಿಬ್ಬರು ಉತ್ತಮ ಸ್ನೇಹಿತರಾಗಿದ್ದು, ದ್ವಾರಕೀಶ್ ವಿಷ್ಣು ಅಭಿನಯದ ಬಹುತೇಕ ಚಿತ್ರಗಳಲ್ಲಿ ತೆರೆಹಂಚಿಕೊಂಡಿದ್ದರು. 1966ರಲ್ಲಿ ಮಮತೆಯ ಬಂಧನ ಸಿನಿಮಾವನ್ನು ದ್ವಾರಕೀಶ್ ಅವರು ಮತ್ತಿಬ್ಬರು ನಿರ್ಮಾಪಕರ ಜೊತೆ ಸೇರಿ ತುಂಬಾ ಪಿಕ್ಚರ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಿದ್ದರು. 1969ರಲ್ಲಿ ಡಾ.ರಾಜ್‌ಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಎಂಬ ಸಿನಿಮಾಗೆ ಬಂಡವಾಳ ಹಾಕುವ ಮೂಲಕ ಸ್ವತಂತ್ರ ನಿರ್ಮಾಪಕರಾಗಿ ಭಡ್ತಿ ಪಡೆದರು.
ದ್ವಾರಕೀಶ್ ಈವರೆಗೂ 40ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. 1985ರಲ್ಲಿ ನೀ ಬರೆದ ಕಾದಂಬರಿ ಎಂಬ ಚಿತ್ರಕ್ಕೆ ಮೊದಲ ಬಾರೊಗೆ ಡೈರೆಕ್ಟರ್ ಕ್ಯಾಪ್ ತೊಟ್ಟರು. ಇದು ಸೂಪರ್ ಹಿಟ್ ಆಗಿತ್ತು. ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿ ಸುಮಾರು 15ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದಾರೆ.