ಡೈಲಿ ವಾರ್ತೆ: 22/April/2024

ಕಾಂಗ್ರೆಸ್ ತಂತ್ರ, ಲೋಕಸಭಾ ಚುನಾವಣಾ ಅಖಾಡದಿಂದ ಹಿಂದೆ ಸರಿದ ದಿಂಗಾಲೇಶ್ವರ ಶ್ರೀ

ಧಾರವಾಡ: ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದ ಶಿರಹಟ್ಟಿಯ ಬಾಳೆಹೊಸೂರು ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ  ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ದಿಂಗಾಲೇಶ್ವರ ಶ್ರೀಗಳು ನಾಪಮಪತ್ರವನ್ನು ಹಿಂಪಡೆದಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಸೂಚಕಾರದ ಸಚ್ಚಿನ್ ಪಾಟೀಲ್ ಮತ್ತು ಅಮೃತ ಬಳ್ಳೊಳ್ಳಿ ಮೂಲಕ ನಾಮಪತ್ರ ಚುನಾವಣಾ ಆಯೋಗದಿಂದ ತರೆಸಿದ್ದಾರೆ.

ದಿಂಗಾಲೇಶ್ವರ ಶ್ರೀ ಸ್ಪರ್ಧಿಸಿದ್ದು ಏಕೆ?
ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸಮರ ಸಾರಿದ್ದು, ಅಭ್ಯರ್ಥಿಯನ್ನು ಬದಲಿಸುವಂತೆ ಪಟ್ಟು ಹಿಡಿದಿದ್ದರು. ಇದಕ್ಕೆ ಬಿಜೆಪಿ ಸೊಪ್ಪು ಹಾಕಲಿಲ್ಲ. ಹೀಗಾಗಿ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿದಿದ್ದರು. ಇವರ ಸ್ಪರ್ಧೆಗೆ  ವೀರಶೈವ ಮಹಾಸಭಾ ಬೆಂಬಲ ವ್ಯಕ್ತಪಡಿಸಿತ್ತು. ಆದರೆ ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಒಂದಾದ ಧಾರವಾಡದ ಮುರುಘಾ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತ್ರ ದಿಂಗಾಲೇಶ್ವರ ಸ್ವಾಮೀಜಿ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು.

ಜೋಶಿ ವಿರುದ್ಧ ಕಣ್ಣಕ್ಕೆ ಇಳಿಯಲು ಕಾರಣ
ಪ್ರಹ್ಲಾದ ಜೋಶಿ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದು ದಿಂಗಾಲೇಶ್ವರ ಸ್ವಾಮೀಜಿ ಬಹಿರಂಗವಾಗಿಯೇ ಹೇಳಿದ್ದರು. ನಾನು ಸ್ವಂತವಾಗಿ ಮಾತನಾಡುತ್ತಿಲ್ಲ, ಪ್ರಲ್ಹಾದ್ ಜೋಶಿಯವರ ಕೈಯಲ್ಲಿ ನೋವು ಅನುಭವಿಸಿದ ಜನರ ಧ್ವನಿಗಾಗಿ ನಾನು ಹೋರಾಟ ನಡೆಸುತ್ತಿದ್ದೆನೆ. ಅವರ ಆಡಳಿತ ವಿನಾಶಕಾರಿಯಾಗಿದೆ. ಮತ್ತು ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಮತ್ತು ಲಿಂಗಾಯತ ಸಮುದಾಯದ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅನ್ಯಾಯುತವಾಗಿ ನಡೆಸಿಕೊಳ್ಳಲಾಗಿದೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಆರೋಪಿಸಿದ್ದರು.
ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ. ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಅರ್ಧಕ್ಕೆ ಕೆಳಗೆ ಇಳಿಸಲಾಗಿದೆ. ಇದು ಲಿಂಗಾಯತ ಸಮುದಾಯದವರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದ್ದರು. ಈ ಎಲ್ಲ ಕಾರಣಗಳಿಂದ ಶಿರಹಟ್ಟಿಯ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.