ಡೈಲಿ ವಾರ್ತೆ: 13/ಮೇ /2024
ವಿಧಾನ ಪರಿಷತ್ ಚುನಾವಣೆ:
ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷೇತರ ಸ್ಪರ್ಧೆಗೆ ರಘುಪತಿ ಭಟ್ ನಿರ್ಧಾರ
ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಘೋಷಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ ಬಿಜೆಪಿಯಲ್ಲೇ ಇರುತ್ತೇನೆ, ಗೆದ್ದರೂ ಬಿಜೆಪಿಯಲ್ಲೇ ಇರುತ್ತೇನೆ. ಇದು ಯಾವುದೇ ಬಂಡಾಯ ಅಥವಾ ಪಕ್ಷ, ವ್ಯಕ್ತಿ ವಿರುದ್ಧವಲ್ಲ. ನನಗಾಗಿ, ಜನರ ಸೇವೆಗಾಗಿ ಕೆಲಸ ಮಾಡಲು ಈ ನಿರ್ಧಾರ ಮಾಡಿದ್ದೇನೆ ಎಂದು ಭಟ್ ಹೇಳಿದ್ದಾರೆ.
ಕರಾವಳಿಗೆ ಪಕ್ಷದಿಂದ ಅನ್ಯಾಯವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದೇನೆ. ಪಕ್ಷದ ವರಿಷ್ಠರು ಟಿಕೆಟ್ ಭರವಸೆ ನೀಡಿದ್ದರು. ಈಗ ನಿರ್ಧಾರ ಬದಲಾಗಿದೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುತ್ತಿರಲಿಲ್ಲ. ಆದರೆ ಹಣ ಬಲ, ಜಾತಿ ಬಲಕ್ಕೆ ಟಿಕೆಟ್ ಸಿಕ್ಕಿದೆ. ಹೀಗಾಗಿ ಜನರೊಂದಿಗೆ ಇದ್ದು ಕೆಲಸ ಮಾಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧಾರ ಮಾಡಿದ್ದೇನೆ ಎಂದು ರಘುಪತಿ ಭಟ್ ಹೇಳಿದರು.