ಡೈಲಿ ವಾರ್ತೆ: 18/ಮೇ /2024
ನೆಲಮಂಗಲ: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ- ಹಲವರಿಗೆ ಗಾಯ
ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು, ಡಿವೈಡರ್ ಮೇಲೆ ಹತ್ತಿದ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಬಸ್ ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್ ರಸ್ತೆಯಲ್ಲಿ ಬರುತ್ತಿದ್ದಾಗ ಚಾಲಕ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 6 ಮಂದಿಗೆ ಗಂಭೀರ ಗಾಯಗಳಾಗಿವೆ. ಉಳಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬಸ್ ನಲ್ಲಿ 35 ಜನರು ಪ್ರಯಾಣಿಸುತ್ತಿದ್ದರು, ಸಲ್ಪ ಯಾಮಾರಿದ್ದರೂ ಬಸ್ ಫ್ಲೈವರ್‌ನಿಂದ ಕೆಳಗೆ ಬೀಳುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.