ಡೈಲಿ ವಾರ್ತೆ: 30/ಜೂ./2024
ಮಡಿಕೇರಿ: “ಗಾಜಿನ ಸೇತುವೆ” ವೀಕ್ಷಣೆ ಸೆ.15ರ ವರೆಗೆ ಸ್ಥಗಿತ – ಜಿಲ್ಲಾಧಿಕಾರಿ
ಮಡಿಕೇರಿ : ಜಿಲ್ಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ “ಗ್ಲಾಸ್ ಬ್ರಿಡ್ಜ್’ಗಳನ್ನು ಸೆ.15ರ ವರೆಗೆ ಸ್ಥಗಿತಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಯಾವುದೇ ರೀತಿಯ ಸುರಕ್ಷೆ ಇಲ್ಲದೆ ಗ್ಲಾಸ್ ಬ್ರಿಡ್ಜ್ ಗಳ ನಿರ್ಮಾಣ ಮಾಡಲಾಗಿದೆ. ಇಂಥ ಗ್ಲಾಸ್ ಬ್ರಿಡ್ಜ್ ಗಳಿಗೆ ಪಿಡಿಒಗಳು ಹೇಗೆ ಎನ್‌ಒಸಿ ನೀಡುತ್ತಾರೆ. ಸಭೆಯ ನಡಾವಳಿ ಮಾಡಿಕೊಂಡು ಎನ್‌ಒಸಿ ನೀಡಿದರೆ ಸಾಕೇ? ಸುರಕ್ಷೆ ಬೇಡವೇ ಎಂದು ಅವರು ಪ್ರಶ್ನಿಸಿದರು.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ “ಗ್ಲಾಸ್‌ಬ್ರಿಡ್ಜ್’ ವೀಕ್ಷಣೆಗೆ ಭೇಟಿ ನೀಡುವುದರಿಂದ ಏನಾದರೂ ತೊಂದರೆಯಾದಲ್ಲಿ ಜವಾಬ್ದಾರಿ ಹೊರುವವರು ಯಾರು ಎಂದು ಪಂಚಾಯತ್‌ರಾಜ್ ಅಧಿಕಾರಿಗಳನ್ನು ಪ್ರಶ್ನಿಸಿದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.