ಡೈಲಿ ವಾರ್ತೆ: 03/ಜುಲೈ /2024
ಹತ್ರಾಸ್ ಸತ್ಸಂಗ ಕಾರ್ಯಕ್ರಮದಲ್ಲಿ 2.5 ಲಕ್ಷ ಮಂದಿ ಭಾಗಿ: ದೇವಮಾನವನ ಕಾರಿನ ಚಕ್ರದ ಧೂಳನ್ನು ಸಂಗ್ರಹಿಸಲು ಮುಗಿಬಿದ್ದ ಅನುಯಾಯಿಗಳು – 121 ಮಂದಿ ಮೃತ್ಯು!
ಲಕ್ನೋ: 80 ಸಾವಿರ ಮಂದಿಗೆ ಅನುಮತಿ ಪಡೆದು 2.5 ಲಕ್ಷ ಜನರನ್ನು ಸಂಘಟಕರು ಸೇರಿಸಿದ ಪರಿಣಾಮ ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟಿದ್ದಾರೆ.
ಈ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಸಂಘಟಕರು 80 ಸಾವಿರ ಮಂದಿ ಭಾಗವಹಿಸುವ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕು ಎಂದು ಕೋರಿ ಮನವಿ ಮಾಡಿದ್ದರು. ಆದರೆ ಕಾರ್ಯಕ್ರಮಕ್ಕೆ 2.5 ಲಕ್ಷ ಮಂದಿ ಭಾಗವಹಿಸಿದ್ದರು ಎಂದು ಎಂಬ ಅಂಶ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಕಾಲ್ತುಳಿತ ಸಂಭವಿಸಿದ್ದು ಹೇಗೆ?
ಸತ್ಸಂಗ ಕಾರ್ಯಕ್ರಮ ಮುಗಿದ ಬಳಿಕ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಕಾರು ಹತ್ತಿದ್ದಾರೆ. ಕಾರು ಮುಂದಕ್ಕೆ ಹೋಗುತ್ತಿದ್ದಂತೆ ಚಕ್ರದ ಧೂಳನ್ನು ಸಂಗ್ರಹಿಸಲು ಅನುಯಾಯಿಗಳು ಮುಗಿಬಿದ್ದಿದ್ದಾರೆ. ಭಾರೀ ಸಂಖ್ಯೆಯಲ್ಲಿದ್ದ ಅನುಯಾಯಿಗಳು ಧೂಳು ಸಂಗ್ರಹಿಸಲು ಓಡಿದ ಪರಿಣಾಮ ಪುರುಷರು, ಮಹಿಳೆಯರು ಮತ್ತು ಮಕ್ಕಳು ಒಬ್ಬರ ಮೇಲೊಬ್ಬರು ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಜನರು ಓಡಿದ್ದರಿಂದ ಸಾವು, ನೋವಿನ ಸಂಖ್ಯೆ ಹೆಚ್ಚಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಬೃಹತ್ ಕಾರ್ಯಕ್ರಮಕ್ಕೆ ಭದ್ರತೆಗಾಗಿ ಕೇವಲ 40 ಪೊಲೀಸ್ ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿದ್ದರು. ಈ ಬಗ್ಗೆ ರಾಜ್ಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದರೂ ಪ್ರಕರಣ ಸಂಬಂಧ ಇನ್ನೂ ಯಾರನ್ನೂ ಬಂಧಿಸಿಲ್ಲ.
ಎಫ್‌ಐಆರ್‌ನಲ್ಲಿ ಸ್ವಯಂಘೋಷಿತ ದೇವಮಾನವನ ಸಹಾಯಕ, ಕಾರ್ಯಕ್ರಮದ ಮುಖ್ಯ ಸಂಘಟಕ ದೇವಪ್ರಕಾಶ್ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಆದರೆ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ ಹೆಸರು ಎಫ್‌ಐಆರ್‌ನಲ್ಲಿ ಇಲ್ಲ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ನರಹತ್ಯೆಗೆ ಸಂಬಂಧಿಸಿ ಕೊಲೆಗೆ ಸಮನಾದ ಇತ್ಯಾದಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸ್ವಯಂ ಘೋಷಿತ ದೇವಮಾನವನನ್ನು ಬಂಧಿಸಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್, ಸದ್ಯ ಈಗ ಪ್ರಕರಣ ತನಿಖಾ ಹಂತದಲ್ಲಿದೆ. ಈಗಲೇ ಯಾವುದೇ ತೀರ್ಮಾನ ತಗೆದುಕೊಂಡು ತನಿಖೆಯ ಮೇಲೆ ಪ್ರಭಾವ ಬೀರಲು ಬಯಸುವುದಿಲ್ಲ ಎಂದು ಹೇಳಿದರು.