ಡೈಲಿ ವಾರ್ತೆ: 29/ಜುಲೈ /2024
ವಿಧಾನಸೌಧದ ಎದುರು ಧರಣಿ ಕೂತ ಸಂಸದ ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು: ತಮ್ಮ ವಿರುದ್ದ ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಆರೋಪವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ಆರಂಭಿಸಿದ್ದಾರೆ.
ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವರಾಗಿದ್ದಾಗ ಅವರು ನಿಭಾಯಿಸಿದ ಸಮಾಜ ಕಲ್ಯಾಣ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿತ್ತು ಎಂದು ಉಲ್ಲೇಖಿಸಿದ್ದರು.
ಈ ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಆಗ್ರಹಿಸಿ ಒಂದು ವಾರದ ಗಡುವು ನೀಡಿದ್ದರು. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಂದ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಜು.29ರ ಬೆಳಗ್ಗೆಯಿಂದ ವಿಧಾನಸೌಧದ ಆವರಣದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಫೋಟೋ ಇಟ್ಟುಕೊಂಡು ಸಂಸದ ಕೋಟ ಶ್ರೀನಿವಾಸ ಪೂಜಾರಿ ಧರಣಿ ಕೂತಿದ್ದಾರೆ.
ಅವರಿಗೆ ಶಾಸಕ ಸುರೇಶ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎನ್. ರವಿಕುಮಾರ್, ಶಾಂತರಾಮ ಸಿದ್ದಿ ಮೊದಲಾದವರು ಸಾಥ್ ನೀಡಿದರು.