ಡೈಲಿ ವಾರ್ತೆ: 20/Sep/2024

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ – ರಾಮನಗರದ ಕಗ್ಗಲೀಪುರ ಠಾಣೆಗೆ ಕರೆದೊಯ್ದ ಪೊಲೀಸರು

ಬೆಂಗಳೂರು, ಸೆ. 20: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​.ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಬೆದರಿಕೆ, ಜಾತಿ ನಿಂದನೆ ಮೇಲೆ ಜೈಲು ಸೇರಿದ್ದ ಮುನಿರತ್ನ
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.
ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.