ಡೈಲಿ ವಾರ್ತೆ: 27/Sep/2024

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.

ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಸಿಆರ್​ಪಿಸಿ 156(3)ರ ಹಲವು ಸೆಕ್ಷನ್​​ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಯಾವೆಲ್ಲಾ ಸೆಕ್ಷನ್ ದಾಖಲು?
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.