ಡೈಲಿ ವಾರ್ತೆ: 14/OCT/2024
ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ ವಂಚನೆ ಪ್ರಕರಣ: ಆರೋಪಿ ನಾಗೇಶ್ ಪೂಜಾರಿ ಬಂಧನ 3 ದಿನ ಪೊಲೀಸ್ ಕಸ್ಟಡಿಗೆ
ಉಡುಪಿ: ಅನಿವಾಸಿ ಭಾರತೀಯ, ತಾಲೂಕಿನ ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಮಾಲಕತ್ವದ ದುಬಾೖಯ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋ.ರೂ. ಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ6 ಸಂಬಂಧಿಸಿ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಮೈಸೂರು ಜಿಲ್ಲೆಯ ನಂಜನಗೂಡು ಬಳಿ ಬಂಧಿಸಿದ್ದಾರೆ.
ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಬಂಧಿತ ಆರೋಪಿ.
ಈತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈತನನ್ನು ಅ.16 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಆರೋಪಿ ಪಡೆದಿದ್ದ ಜಾಮೀನನ್ನು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯ ರದ್ದುಪಡಿಸಿತ್ತು. ಈ ಹಿನ್ನೆಲೆ ಯಲ್ಲಿ ತಲೆಮರೆಸಿ ಕೊಂಡಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ದುಬೈನ ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್ಸ ಸಂಬಂಧಿತ ಹೊಟೇಲೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದ ನಾಗೇಶ್ ಪೂಜಾರಿ 2.5ಕೋ.ರೂ.ಗೂ ಅಧಿಕ ಹಣ ವಂಚಿಸಿದ ಆರೋಪಕ್ಕೆ ಗುರಿಯಾಗಿದ್ದ. ಹೊಟೇಲ್ ಮ್ಯಾನೇಜರ್ ಸುನೀಲ್ ಕುಮಾರ್ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣವು ಉಡುಪಿ ಸೆನ್ ಠಾಣೆಗೆ ವರ್ಗಾವಣೆಗೊಂಡಿತ್ತು.