ಡೈಲಿ ವಾರ್ತೆ: 21/OCT/2024
ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ
ತೆಂಕುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಅ. 21 ರಂದು ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ.
ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ. ತಂದೆಯವರ ಪ್ರೇರಣೆಯಿಂದ ಅಮ್ಹಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು. ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು.