ಡೈಲಿ ವಾರ್ತೆ: 21/OCT/2024
ಕಾರು, ಟ್ರ್ಯಾಕ್ಟರ್ ಇದ್ದೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್ ಸೂಚನೆ
ಚಿಕ್ಕಮಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ (BPL) ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52 ಸಾವಿರ ಕಾರ್ಡ್ ರದ್ದಾಗುವ ಸಾಧ್ಯತೆ.
ಪಡಿತರ ಚೀಟಿ ಹೊಂದಲು ಯಾರು ಅನರ್ಹರು:
➤ ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು.
➤ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರು.
➤ ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
➤ ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
➤ ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ.
ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.