ಡೈಲಿ ವಾರ್ತೆ: 25/OCT/2024

ಅ. 26, 27 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ
ಕೃಷಿ ಮೇಳ

ಬ್ರಹ್ಮಾವರ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಜಿಲ್ಲಾ ಪಂಚಾಯತ್ ಉಡುಪಿ, ಬ್ಯಾಂಕ್ ಆಫ್ ಬರೋಡಾ (ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ) ಉಡುಪಿ, ಕೆನರಾಬ್ಯಾಂಕ್ ವಾರಂಬಳ್ಳಿ ಬ್ರಹ್ಮಾವರ ಹಾಗೂ ಜನತಾ ಫಿಶ್ ಮೀಲ್ & ಆಯಿಲ್ ಪ್ರೋಡಕ್ಟ್್ಸ ಕೋಟ ಮಣೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಕೃಷಿ ಮೇಳ ಕಾರ್ಯಕ್ರಮವು ಅಕ್ಟೋಬರ್ 26 ಮತ್ತು 27 ರಂದು ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ ಎಂದು ಅ. 24 ರಂದು ಗುರುವಾರ ಬ್ರಹ್ಮಾವರದ ವಲಯ ಕೃಷಿ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಹ ಸಂಶೋಧನಾ ನಿರ್ದೇಶಕ ಡಾ. ಧನಂಜಯ್ ತಿಳಿಸಿದರು.

ಅಕ್ಟೋಬರ್ 26 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕೃಷಿ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಪತಿ ಡಾ. ಆರ್.ಸಿ ಜಗದೀಶ ಅಧ್ಯಕ್ಷತೆ ವಹಿಸಲಿದ್ದಾರೆ.

ವಸ್ತು ಪ್ರದರ್ಶನವನ್ನು ಕೋಟ ಮಣೂರು ಜನತಾ ಫಿಶ್ ಮೀಲ್ & ಆಯಿಲ್ ಪ್ರೋಡಕ್ಟ್್ಸ ವ್ಯವಸ್ಥಾಪಕ ನಿರ್ದೇಶಕ ಆನಂದ ಸಿ ಕುಂದರ್ ಉದ್ಘಾಟಿಸಲಿದ್ದು, ಕೆ.ಶಿ.ನಾ.ಕೃ.ತೋ.ವಿ.ವಿ ಶಿಕ್ಷಣ ನಿರ್ದೇಶಕಿ ಡಾ. ಬಿ ಹೇಮ್ಲಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಮಂಗಳೂರು ವಲಯ ಬ್ಯಾಂಕ್ ಆಫ್ ಬರೋಡಾ ವಲಯ ಮುಖ್ಯಸ್ಥ ಮತ್ತು ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನಾ, ಉಡುಪಿ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಉಪ ಪ್ರಧಾನ ವ್ಯವಸ್ಥಾಪಕಿ ಶೀಬಾ ಸಹಜನ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ತಾಂತ್ರಿಕ ಕೈಪಿಡಿಯನ್ನು ಬಿಡುಗಡೆಗೊಳಿಸಲಿದ್ದಾರೆ.
ಪ್ರಗತಿಪರ ಕೃಷಿಕರಿಗೆ ಸನ್ಮಾನವನ್ನು ಕೆ.ಶಿ.ನಾ.ಕೃ.ತೋ.ವಿ.ವಿ ಸಂಶೋಧನಾ ನಿರ್ದೇಶಕ ಡಾ. ಬಿ.ಎಂ ದುಷ್ಯಂತ ಕುಮಾರ್, ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ ಗುರುಮೂರ್ತಿ, ಬೆಂಗಳೂರು ಕೃಷಿ ತಂತ್ರಜ್ಞಾನ ಅಳವಡಿಕಾ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಡಿ.ವಿ ಶ್ರೀನಿವಾಸ ರೆಡ್ಡಿ ಹಾಗೂ ಉಡುಪಿಯ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ ಕುಮಾರ್ ಕೊಡ್ಗಿ, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಎಸ್.ಡಿ ಸಂಪತ್ ಸಾಮ್ರಾಜ್ಯ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ.ಪ್ರತಾಪ್‌ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ, ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ನವೀನ್ ಚಂದ್ರ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್ ಆರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಕೆ.ವಿ.ಕೆ ದಕ್ಷಿಣ ಕನ್ನಡ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಟಿ.ಜೆ ರಮೇಶ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕೃಷಿ ಮೇಳದಲ್ಲಿ ಮೊದಲನೇ ದಿನ ಕೃಷಿಮೇಳದ ಉದ್ಘಾಟನಾ ಸಮಾರಂಭ ಅಲ್ಲದೇ, ಕೃಷಿ ವಸ್ತುಪ್ರದರ್ಶನ ಮಳಿಗೆಗಳ ಮತ್ತು ಸಮಗ್ರ ಕೃಷಿ ಘಟಕಗಳ ಕ್ಷೇತ್ರ ಭೇಟಿಯನ್ನು ಆಯೋಜಿಸಲಾಗಿದ್ದು, ಅಪರಾಹ್ನ “ಅಡಿಕೆ ಆಧಾರಿತ ಕೃಷಿ” ಮತ್ತು “ಜೇನು ಕೃಷಿ” ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಎರಡನೇ ದಿನದ ಕಾರ್ಯಕ್ರಮದಲ್ಲಿ “ವಿಕಸಿತ ಕೃಷಿಯಲ್ಲಿ ಕೃಷಿ ಮತ್ತು ಪಶು ಸಖಿಯರು” ಮತ್ತು “ಅಡಿಕೆ ಮತ್ತು ಹಲಸಿನಲ್ಲಿ ಮೌಲ್ಯವರ್ಧನೆ” ಎಂಬ ವಿಚಾರ ಸಂಕಿರಣಗಳನ್ನು ಏರ್ಪಡಿಸಲಾಗಿದೆ. ಈ ಮೂರು ವಿಚಾರ ಸಂಕಿರಣಗಳಲ್ಲಿ ಇಲಾಖಾ ಮುಖ್ಯಸ್ಥರು, ಹಿರಿಯ ವಿಜ್ಞಾನಿಗಳು ಮತ್ತು ರಾಷ್ಟ್ರೀಯ ಸಂಶೋಧನಾ ಕೇಂದ್ರಗಳ ವಿಜ್ಞಾನಿಗಳು, ಭಾಗವಹಿಸಿ ಕೃಷಿಕರಿಗೆ ಅಗತ್ಯ ಮಾಹಿತಿಯನ್ನು ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ರೈತರು ಮತ್ತು ವಿಜ್ಞಾನಿಗಳ ಮುಕ್ತ ಮುಖಾಮುಖಿ ಚರ್ಚೆಯನ್ನು ಆಯೋಜಿಸಲಾಗಿದ್ದು ಹಾಗೂ ಪ್ರಗತಿಪರ ರೈತರು ಕೃಷಿಯ ಕುರಿತಾಗಿ ತಮ್ಮ ಅನುಭವಗಳನ್ನು ಮಂಡಿಸಲೂ ಏರ್ಪಾಡು ಮಾಡಲಾಗಿರುತ್ತದೆ.

ಕೃಷಿಮೇಳದಲ್ಲಿ ಈ ವರ್ಷ ಸುಮಾರು 200 ಕ್ಕೂ ಅಧಿಕ ಮಳಿಗೆಗಳಲ್ಲಿ ವಿವಿಧ ಇಲಾಖೆ, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಿಂದ ಅಭಿವೃದ್ಧಿ ಪಡಿಸಿರುವ ಕೃಷಿ ತಂತ್ರಜ್ಞಾನಗಳ ಮತ್ತು ಕೃಷಿ ಪರಿಕರಗಳ ವಸ್ತು ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಈ ಕೃಷಿಮೇಳದಲ್ಲಿ ಕರಾವಳಿ ಮತ್ತು ಇತರೇ ಜಿಲ್ಲೆಗಳಿಂದ ಸುಮಾರು 2 ಲಕ್ಷ ರೈತರು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು, ಕೃಷಿಯಲ್ಲಿ ತೊಡಗಿಸಿರುವ ರೈತರು, ವಿಸ್ತರಣಾ ಕಾರ್ಯಕರ್ತರು, ಉದ್ದಿಮೆದಾರರು, ಸ್ವ ಸಹಾಯ ಸಂಘಗಳ ಸದಸ್ಯರು ಮತ್ತು ಕೃಷಿ ಆಸಕ್ತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಕೃಷಿ ಮೇಳದ ಪ್ರಯೋಜನ ಪಡೆಯಲು ಈ ಮೂಲಕ ವಿನಂತಿ ಮಾಡಲಾಗಿದೆ ಎಂದು ಡಾ. ಧನಂಜಯ ಬಿ ಹೇಳಿದರು.

ಈ ಸಂದರ್ಭದಲ್ಲಿ ಡಾ. ಲಕ್ಷ್ಮಣ, ಡಾ. ಶಂಕರ್ ಎಂ. ಸುಧೀರ್ ಕಾಮತ್ ಉಪಸ್ಥಿತರಿದ್ದರು.