ಡೈಲಿ ವಾರ್ತೆ: 31/OCT/2024

ಬ್ರಹ್ಮಾವರ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಹಾಗೂ ಜಿಲ್ಲಾ ಪತ್ರಕರ್ತರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬ್ರಹ್ಮಾವರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ ಮೂರು ದಶಕಗಳ ಪ್ರಾಮಾಣಿಕ ಸೇವೆ ಸಲ್ಲಿಸಿ, 25 ವರ್ಷಗಳಿಂದ ಉಡುಪಿ ಮಿತ್ರ ಪತ್ರಿಕೆ ಸಂಪಾದಕರಾಗಿರುವ, ಬ್ರಹ್ಮಾವರ ವಲಯ ಪತ್ರಕರ್ತರ ಸಂಘ, ತಾಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘಟನೆಯನ್ನು ಗಟ್ಟಿಯಾಗಿ ಕಟ್ಟಿಬೆಳೆಸಿದ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಹಾಗೂ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ಪತ್ರಿಕಾ ಕ್ಷೇತ್ರದಲ್ಲಿ ಉಡುಪಿ ಜಿಲ್ಲಾಡಳಿತ 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ಪ್ರಭಾಕರ ಆಚಾರ್ಯ ಅವರು ಬ್ರಹ್ಮಾವರ ಪತ್ರಕರ್ತರ ಸಂಘದ ಮೂಲಕ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಸ್ಥಾಪಿಸಿ ತಾಲೂಕು ಸಂಘದ ಸದಸ್ಯರ ನೆರವಿನೊಂದಿಗೆ ರಾಜ್ಯಕ್ಕೆ ಮಾದರಿಯಾಗುವ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ಹಾಗೂ ಉಡುಪಿಮಿತ್ರ ಪತ್ರಿಕೆಯ ಮೂಲಕ ನಿರಂತರವಾಗಿ ಜನಪರ ವರದಿಗಳನ್ನು ಪ್ರಕಟಿಸುತ್ತಿದ್ದಾರೆ ಹಾಗೂ ಉಪ್ರಲ್ಲಿ ಕಾಳಿಕಾಂಬ ದೇವಸ್ಥಾನದ ಸೇವಾದಳ ಅಧ್ಯಕ್ಷರಾಗಿ, ಪ್ರಸ್ತುತ ಆಡಳಿತ ಮಂಡಳಿ ಎರಡನೇ ಮೊಕ್ತೇಸರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರಶಸ್ತಿ ಭಾಜನರಾದ ಪ್ರಭಾಕರ ಆಚಾರ್ಯರನ್ನು ಹಾಗೂ ಉಡುಪಿ ಜಿಲ್ಲಾ ಪತ್ರಕರ್ತರ ಸಂಘವನ್ನು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಅಭಿನಂದಿಸಿದೆ.