ಡೈಲಿ ವಾರ್ತೆ: 08/NOV/2024
ಕುಂದಾಪುರ ತಾಲೂಕು ಪಂಚಾಯತ್ ನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿ ಲೋಕಾರ್ಪಣೆ
ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರಕಾರದ ಐದೂ ಗ್ಯಾರಂಟಿಗಳು ನಿರಂತರ – ದಿನೇಶ್ ಹೆಗ್ಡೆ ಮೊಳಹಳ್ಳಿ
ಕುಂದಾಪುರ: ರಾಜ್ಯ ಸರಕಾರದ ಐದು ಗ್ಯಾರಂಟಿಗಳಿಂದ ಜನರಿಗೆ ಬಹಳಷ್ಟು ಪ್ರಯೋಜವಾಗಿದೆ. ಇದನ್ನು ಸಹಿಸಿಕೊಳ್ಳಲಾಗದ ವಿರೋಧ ಪಕ್ಷದವರು ಸರಕಾರದ ಗ್ಯಾರಂಟಿಗಳ ಬಗ್ಗೆ ಲೇವಡಿ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ್ ಹೆಗ್ಡೆ ಮೊಳಹಳ್ಳಿ ಹೇಳಿದರು. ಅವರು ನ. 8 ರಂದು ಶುಕ್ರವಾರ ಕುಂದಾಪುರ ಇಲ್ಲಿನ ತಾಲೂಕು ಪಂಚಾಯತ್ ಕಛೇರಿಯಲ್ಲಿ ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದಲ್ಲಿ ಐದು ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವವರೆಗೆ ಸರಕಾರದ ಐದೂ ಗ್ಯಾರಂಟಿಗಳು ನಿರಂತರವಾಗಿ ನಡೆಯುತ್ತದೆ ಎಂದು ಹೇಳಿದರು.
ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಮಾತನಾಡಿ ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಿದೆ. ಅಲ್ಲದೆ ಸರಕಾರದ ಗ್ಯಾರಂಟಿ ಯೋಜನೆಯ ಅನುಷ್ಠಾನವನ್ನು ಪ್ರಚಾರದ ಮೂಲಕ ಮಾಡಬೇಕೆನ್ನುವ ಹಿನ್ನಲೆಯಲ್ಲಿ ಈ ತಾಲೂಕು ಸಮಿತಿ ರಚಿಸಲಾಗಿದೆ. ಇದರೊಂದಿಗೆ
ಈ ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿ ಯೋಜನೆ ತಲುಪದೇ ಇರುವ ಅರ್ಹರನ್ನು ಗುರುತಿಸಿ ಅವರಿಗೆ ಗ್ಯಾರೆಂಟಿ ಯೋಜನೆಗಳ ಪ್ರಯೋಜನ ದೊರಕಿಸಿಕೊಡಲು ಶ್ರಮಿಸುವುದಾಗಿ ಹೇಳಿದರು.
ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲು, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ ಶೆಟ್ಟಿ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಹುಕ್ಕೇರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೋ, ಕುಂದಾಪುರ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಶಂಕರ ಕುಂದರ್, ಸಮಿತಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಸಂತೋಷ ಕುಮಾರ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮವನ್ನು ನಿರೂಪಿಸಿದರು.