ಡೈಲಿ ವಾರ್ತೆ:10/DEC/2024
ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಇನ್ನಿಲ್ಲ
ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು.
ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನಲೆ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಡಾ. ಸತ್ಯನಾರಾಯಣ ಮೈಸೂರು, ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.
ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ರಾಜಕಾರಣಕ್ಕೆ ಎಂಟ್ರಿ:
1962 ರಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮೂಲಕ ಗೆಲುವು ಸಾಧಿಸಿದ ಕೃಷ್ಣ ಆ ಮೂಲಕ ಚುನಾವಣಾ ರಾಜಕೀಯ ಜೀವನಕ್ಕೆ ಧುಮುಕಿದ್ದರು. ಆ ಬಳಿಕ ಅವರು ‘ಪ್ರಜಾ ಸೋಷಿಯಲಿಸ್ಟ್ ಪಕ್ಷ’ಕ್ಕೆ ಸೇರಿದ್ದರು. ಆದರೆ 1967 ರ ಚುನಾವಣೆಯಲ್ಲಿ ಮದ್ದೂರಿನಿಂದ ಕಾಂಗ್ರೆಸ್‌ನ ಎಂಎಂ ಗೌಡ ವಿರುದ್ಧ ಸೋಲನುಭವಿಸಿದ್ದರು. 1968 ರಲ್ಲಿ ಹಾಲಿ ಸಂಸದರು ನಿಧನರಾದಾಗ ಅವರು ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ರಾಷ್ಟ್ರ ರಾಜಕೀಯಕ್ಕೆ ಅಡಿಯಿಟ್ಟರು.
1968 ರ ಉಪಚುನಾವಣೆಯ ನಂತರ ಮಂಡ್ಯ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸಿದರು. 1971 ಮತ್ತು 1980 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗಳನ್ನು ಗೆದ್ದಿದ್ದರು. ಆಗ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಉಳಿಸುವಲ್ಲಿ ಎಸ್ಎಂ ಕೃಷ್ಣ ಪಾತ್ರ ಪ್ರಮುಖವಾದದ್ದಾಗಿತ್ತು.
ಪಾಂಚಜನ್ಯ ಯಾತ್ರೆಯಿಂದ ಮುಖ್ಯಮಂತ್ರಿ ಹುದ್ದೆಯತ್ತ…
1999 ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರು ಅದೇ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲುವಿನತ್ತ ಮುನ್ನಡೆಸಿದರು. ಆ ಸಂದರ್ಭದಲ್ಲಿ ಎಸ್ಎಂ ಕೃಷ್ಣ ನಡೆಸಿದ್ದ ಪಾಂಚಜನ್ಯ ಯಾತ್ರೆ ಕರ್ನಾಟಕ ರಾಜಕಾರಣದಲ್ಲಿ ಕಾಂಗ್ರೆಸ್ಗೆ ಶಕ್ತಿ ತುಂಬಿತ್ತು.
2004 ರ ಡಿಸೆಂಬರ್ನಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಕೃಷ್ಣ 2008 ರ ಮಾರ್ಚ್ 5 ರಂದು ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು. ನಂತರ ರಾಜ್ಯಸಭೆಗೆ ಆಯ್ಕೆಯಾದ ಅವರು 2009 ರ ಮೇ 22ರಂದು ಅಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಸಂಪುಟದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವರಾದರು.
ಇಳಿವಯಸ್ಸಿನಲ್ಲಿ ಬಿಜೆಪಿ ಸೇರ್ಪಡೆ
ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ನಲ್ಲೇ ಪ್ರಬಲ ನಾಯಕರಾಗಿದ್ದ ಎಸ್ಎಂ ಕೃಷ್ಣ, ರಾಜಕೀಯ ಜೀವನದ ಕೊನೆಗಾಲದಲ್ಲಿ, 2017 ರ ಜನವರಿ 29 ರಂದು ಕಾಂಗ್ರೆಸ್ ದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 2017 ರ ಮಾರ್ಚ್ನಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದರು.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು. ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.