


ಡೈಲಿ ವಾರ್ತೆ:19/DEC/2024



ಲಕ್ಷ್ಮೀ ಹೆಬ್ಬಾಳ್ಕರ್‌ಗೆ ವೇ* ಪದಬಳಕೆ ಆರೋಪ: ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ 15 ಜನರ ಬಂಧನ!
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ವೇ* ಎಂಬ ಬಳಕೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲಿಯೇ ಪರಿಶೀಲನೆ ಕಾರ್ಯ ನಡೆಯುತ್ತಿರುವ ನಡುವೆಯೇ ಲಕ್ಷ್ಮೀ ಹೆಬ್ಬಾಳ್ಕರ್ ಅವರ 15 ಜನ ಬೆಂಬಲಿಗರು ಸಿ.ಟಿ. ರವಿ ಅವರ ಕಾರಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಅಧಿವೇಶನದ ವಿಐಪಿ ಗೆಟ್ ಬಳಿ ಸಿ.ಟಿ. ರವಿ ಅವರು ಬಂದಾಗ ಗಲಾಟೆಯಾಗಿದೆ. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬೆಂಬಲಿಗರು ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನ ಮಾಡಿದ್ದಾರೆ. ಸಿ.ಟಿ. ರವಿ ಅವರು ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಏಕಾಏಕಿ ರವಿ ಅವರ ಕಾರಿನತ್ತ ನುಗ್ಗಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ. ರವಿ ಕಾರು ಮುತ್ತಿಗೆ ಹಾಕಿದ ಕಾರ್ಯಕರ್ತರು ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಡಿದು ಹಿಂದಕ್ಕೆ ತಳ್ಳಿದ್ದಾರೆ.