ಡೈಲಿ ವಾರ್ತೆ:22/DEC/2024

ಶಿಕ್ಷಣಕ್ಕೆ ಸರಕಾರದ ಆದ್ಯತೆ : ಸಚಿವ ದಿನೇಶ್ ಗುಂಡೂರಾವ್

ಬಂಟ್ವಾಳ : ಸರ್ವರಿಗೂ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮತ್ತು ಶಿಕ್ಷಕರ ನೇಮಕಾತಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು

ಅವರು ಸೋಮವಾರ ಬಂಟ್ವಾಳ ತಾಲೂಕು ಬೊಂಡಾಲದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಾಣಗೊಂಡ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಹಾಗೂ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಕೇಂದ್ರ ಹಾಗೂ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿದ ಬಳಿಕ ಮಾತನಾಡಿದರು.

ಸರಕಾರಿ ಶಾಲೆಗಳಲ್ಲಿ ಕೊಠಡಿ ನಿರ್ಮಾಣ, ಆಟದ ಮೈದಾನ ಅಭಿವೃದ್ಧಿ ಸೇರಿದಂತೆ ಮೂಲ ಸೌಲಭ್ಯಗಳಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಶಿಕ್ಷಕರ ನೇಮಕಾತಿಗೂ ಆದ್ಯತೆ ನೀಡಲಾಗುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕೆಂದು ಅವರು ತಿಳಿಸಿದರು.

ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಪ್ರಸ್ತುತ ಸರಕಾರಿ ಶಾಲೆಗಳು ಶೈಕ್ಷಣಿಕವಾಗಿ ಉತ್ತಮ ಫಲಿತಾಂಶ ಮತ್ತು ಸಾಧನೆ ಪಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದರು .

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ನಾಯಕ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಚ್.ಆರ್.ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ ಕುಮಾರ್ ರೈ, ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಬೊಂಡಾಲ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಜಿಲ್ಲಾ ನಿರ್ಮಿತಿ ಕೇಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.