ಡೈಲಿ ವಾರ್ತೆ: 20/JAN/2025

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್: ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ಪ್ರಕಟ

ಕೋಲ್ಕತ್ತಾ| ಆರ್‌ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್‌ಗೆ ಸೀಲ್ದಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಇಂದು ಪ್ರಕರಣದ ವಿಚಾರಣೆ ನಡೆಸಿದ ಸೀಲ್ದಾ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಜೊತೆಗೆ ವೈದ್ಯೆ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದು, 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

2024ರ ಆಗಸ್ಟ್ 9ರಂದು ಆಸ್ಪತ್ರೆಯ ಕಾನ್ಫರೆನ್ಸ್ ಕೊಠಡಿಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ವೈದ್ಯರ ಮೇಲೆ ಮೊದಲು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 50 ಸಾಕ್ಷಿಗಳ ವಿಚಾರಣೆ ನಡೆದು ಜನವರಿ 9ರಂದು ವಿಚಾರಣೆ ಮುಕ್ತಾಯವಾಯಿತು.
ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂಜಯ್ ರಾಯ್ ನನ್ನು ಪೊಲೀಸರು ಆಗಸ್ಟ್ 10 ರಂದು ಬಂಧಿಸಿದ್ದರು. ಮೃತ ವೈದ್ಯೆಯ ದೇಹದ ಬಳಿ ಬ್ಲೂಟೂತ್ ಪತ್ತೆಯಾಗಿದ್ದು, ಸಂಜಯ್ ರಾಯ್ ಅದೇ ಬ್ಲೂ ಟೂತ್ ಧರಿಸಿ ಸೆಮಿನಾರ್ ಹಾಲ್ ಪ್ರವೇಶಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.