


ಡೈಲಿ ವಾರ್ತೆ: 27/ಮಾರ್ಚ್ /2025


ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ: ಜಯಮೃತ್ಯುಂಜಯ ಸ್ವಾಮೀಜಿ

ಧಾರವಾಡ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು. ಪಕ್ಷದಲ್ಲಿರುವ ಪಂಚಮಸಾಲಿಗಳು ಹೊರಗೆ ಬರಬೇಕು. ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ.
ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು.
ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವುದಿಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು.
ನಾವು ಉಗ್ರ ಹೋರಾಟ ಮಾಡುತ್ತೇವೆ. ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅಂದು, ಕಿತ್ತೂರು ರಾಣಿ ಚನ್ನಮ್ಮಳಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಹೀಗೆ ಮಾಡುತ್ತಿವೆ. 21ನೇ ಶತಮಾನದಲ್ಲಿ ಅದೇ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಉಚ್ಛಾಟನೆ ವಾಪಸ್ ಪಡೆಯಲೇಬೇಕು. ಇಲ್ಲದೇ ಹೋದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.