




ಡೈಲಿ ವಾರ್ತೆ: 26/ಏಪ್ರಿಲ್/2025


ವಕ್ಫ್ ಪ್ರತಿಭಟನೆಯಲ್ಲಿ ಭಾಗಿ; ಬಿಜೆಪಿಯಿಂದ ಕಚೇರಿವಾಲೆ ಆರು ವರ್ಷ ಉಚ್ಚಾಟನೆ
ಬೀದರ್: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್‌ನವರು ನಡೆಸಿದ ಪ್ರತಿಭಟನೆಯಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಭಾಗವಹಿಸಿದ್ದ ಬಿಜೆಪಿ ರಾಷ್ಟ್ರೀಯ ಅಲ್ಪಸಂಖ್ಯಾತರ ಮೋರ್ಚಾ ಪ್ರಧಾನ ಕಾರ್ಯದರ್ಶಿ ರೌಫೊದ್ದೀನ್ ಕಚೇರಿವಾಲೆ ಅವರನ್ನು ಆರು ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ವಿರುದ್ಧವಾಗಿ ನಡೆದುಕೊಂಡಿರುವ ಕಚೇರಿವಾಲೆ ಅವರಿಗೆ ಏ. 18ರಂದು ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಅದಕ್ಕೆ ಉತ್ತರ ನೀಡದ ಕಾರಣ ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷ ಪಕ್ಷದಿಂದ ಉಚ್ಚಾಟಿಸಿ ರಾಜ್ಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ ಪಾಟೀಲ ಕ್ರಮ ಕೈಗೊಂಡಿದ್ದಾರೆ ಎಂದು ಬೀದರ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಶುಕ್ರವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಚೇರಿವಾಲೆ ಅವರು ಕರ್ನಾಟಕ ರಾಜ್ಯ ಹಜ್ ಮಂಡಳಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯರಾಗಿದ್ದಾರೆ.