



ಡೈಲಿ ವಾರ್ತೆ: 14/MAY/2025


ಬಂಟ್ವಾಳ| ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಮತ್ತು ಖಜಾನೆಯ ಎಫ್.ಡಿ.ಎ

ಬಂಟ್ವಾಳ : ಬಂಟ್ವಾಳ ತಾಲೂಕು ಕಛೇರಿಗೆ ಬುಧವಾರ ನಡೆಸಿದ ಲೋಕಾಯುಕ್ತ ಪೊಲೀಸರು ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ರವರ ವಿರುದ್ಧ ಪ್ರಕರಣ ದಾಖಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ವೊಂದರಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದು 2023ರ ಅಕ್ಟೋಬರ್ ತಿಂಗಳಿನಲ್ಲಿ ವಯೋ ನಿವೃತ್ತಿ ಹೊಂದಿದ್ದು, ಜೂನ್ 2024 ರಂದು ಮರಣ ಹೊಂದಿದ್ದರು. ಇವರು ಪತ್ನಿ ಗಂಡನ ಮರಣ ಉಪದಾನದ ಬಗ್ಗೆ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯಲೆಕ್ಕಿಗ ಭಾಸ್ಕರ್ ಬಳಿ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿರುವುದಿಲ್ಲ. ನಂತರ ಗಂಡನ ಮರಣ ಉಪದಾನವನ್ನು ಜಮೆ ಮಾಡಿಕೊಟ್ಟಿರುವ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರೂ 5000/- ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ರೂ 5000/- ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್.ರವರು ತಲಾ ರೂ 5000/- ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ.
ಇವರು ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪ್ರಭಾರ ಪೊಲೀಸ್ ಅಧೀಕ್ಷಕರ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಶ್ರೀಮತಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಅವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಂಡಿರುತ್ತಾರೆ.