



ಡೈಲಿ ವಾರ್ತೆ: 02/JUNE/2025


ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಎಚ್ಚರಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಮಂಗಳೂರು ನಗರ ಮತ್ತು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಠಾಣಾ ಮಟ್ಟದಲ್ಲಿ ಪ್ರತಿಬಂಧಕ ಕ್ರಮಗಳನ್ನು ಪೊಲೀಸರು ನಡೆಸುತ್ತಿದ್ದಾರೆ.
ಇದಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಎಚ್ಚರಿಕೆ ನೀಡಿದ್ದಾರೆ.
ದ.ಕ. ಜಿಲ್ಲೆಯ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲ ತಿಂಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಆಗಿದೆ. ಕಳೆದ ಸುಮಾರು 10 ವರ್ಷಗಳ ಕೊಲೆ ಪ್ರಕರಣಗಳನ್ನು ವಿಶ್ಲೇಷಣೆ ಮಾಡಿದಾಗ ಕೊಲೆ ಆರೋಪಿಗಳು ಮತೀಯ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮತೀಯ ಸಂಘಟನೆಗಳ ಮುಖಂಡರು ನಿತ್ಯ ಇರುವ ಸ್ಥಳ ಹಾಗೂ ಅವರ ಕಾರ್ಯಚಟುಟಿಕೆಗಳ ಬಗ್ಗೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಅವರ ಹೆಸರನ್ನು ಪಟ್ಟಿ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಮತೀಯ ಸಂಘಟನೆಗಳ ಸದಸ್ಯರ ಪರಿಶೀಲನೆಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.