ಡೈಲಿ ವಾರ್ತೆ: 04/ಜುಲೈ/2025

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿದೇಶದಿಂದ ಬಂದಿಳಿಯುತ್ತಿದ್ದಂತೆಯೇ NIA ಬಲೆಗೆ

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಅಬ್ದುಲ್ ರಹಿಮಾನ್​ ಕತಾರ್​ನಲ್ಲಿ ತಲೆಮರೆಸಿಕೊಂಡಿದ್ದನು. ಶುಕ್ರವಾರ (ಜು.04) ಕತಾರ್​ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್​ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್​ಐಎ ಸಲ್ಲಿಸಿದ ಚಾರ್ಜ್​ ಶೀಟ್​ನಲ್ಲಿದೆ.

ಎನ್​ಐಎ ಟ್ವೀಟ್​
ಪ್ರವೀಣ್​ ನೆಟ್ಟಾರು ಕೊಲೆ
2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಗಂಭೀರತೆ ಅರಿತ ಎನ್ಐಎ ಆಗಸ್ಟ್ 4ರಂದು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಈ ಪ್ರಕರಣದಲ್ಲಿ ಇದುವರೆಗೆ 28 ಜನ ಆರೋಪಿಗಳ ವಿರುದ್ಧ ಎನ್ಐಎ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.