ಡೈಲಿ ವಾರ್ತೆ: 05/ಸೆ./2025

ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಾಳುಗಳಿಂದ ಚಿಕಿತ್ಸೆಗೆ ಮುನ್ನ ಹಣ ಕೇಳಿದರೆ ವೈದ್ಯರಿಗೆ ಜೈಲು ಶಿಕ್ಷೆ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡವರ ಬಳಿ ಚಿಕಿತ್ಸೆಗೂ ಮುನ್ನ ಹಣ ಕೇಳಿದರೆ ಸರ್ಕಾರಿ, ಖಾಸಗಿ ಆಸ್ಪತ್ರೆ ವೈದ್ಯರಿಗೆ ಜೈಲು ಶಿಕ್ಷೆ ಆಗಲಿದೆ.
ಈ ಬಗ್ಗೆ ರಾಜ್ಯ ಸರ್ಕಾರ ಶುಕ್ರವಾರ ಸುತ್ತೋಲೆ ಹೊರಡಿಸಿದೆ. ಆ ಮೂಲಕ ರಾಜ್ಯದ ವೈದ್ಯರಿಗೆ ಸಂಕಷ್ಟ ಎದುರಾಗಿದೆ.

ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿತ್ತು. ಅದರಂತೆ ಇಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

ಅಪಘಾತದಲ್ಲಿ ಗಾಯಗೊಂಡವರಿಗೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಸೂಕ್ತ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ಮುಂಗಡ ಹಣಕ್ಕೆ ಒತ್ತಾಯಿಸಿದರೆ ಜೈಲು ಶಿಕ್ಷೆ ವಿಧಿಸಲಾಗುವುದು.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ನಿಬಂಧನೆ ಅಡಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಮಾತ್ರವಲ್ಲದೆ, ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು, ವಿಷಪ್ರಾಶನ ಮತ್ತು ಕ್ರಿಮಿನಲ್ ಹಲ್ಲೆ ಪ್ರಕರಣಗಳು ಒಳಗೊಂಡಿದೆ.
ಇಂತಹ ಪ್ರಕರಣಗಳಲ್ಲಿ ಚಿಕಿತ್ಸೆಗೆ ಗಾಯಾಗಳು ಬಂದಾಗ ಮುಂಗಡ ಹಣಕ್ಕೆ ಬೇಡಿಕೆ ಇಡದೇ ಅವರಿಗೆ ಚಿಕಿತ್ಸೆ ನೀಡಬೇಕು. ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ವಿಳಂಬ ಮಾಡುವ ಹಾಗಿಲ್ಲ. ಒಂದು ವೇಳೆ ತುರ್ತು ಚಿಕಿತ್ಸೆ ನೀಡದಿದ್ದಲ್ಲಿ ಅಥವಾ ಚಿಕಿತ್ಸೆಗೂ ಮುನ್ನ ಹಣ ಕೇಳಿದ್ದಲ್ಲಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007 ರ ಸೆಕ್ಷನ್ 2ರ ಪ್ರಕಾರ ಒಂದು ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವುದರೊಂದಿಗೆ ಜೈಲು ಶಿಕ್ಷೆ ಆಗುವುದು.