
ಡೈಲಿ ವಾರ್ತೆ: 01/ಅ./2025
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಬೆಂಗಳೂರಿನಲ್ಲಿ ಅವರು ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದ್ದಾರೆ.