
ಡೈಲಿ ವಾರ್ತೆ: 15//DEC/2025
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್‌ಗಳು ಭಸ್ಮ

ಬಳ್ಳಾರಿ: ಬಳ್ಳಾರಿ ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರಿಯಾಗಿ ಹೊತ್ತಿಕೊಂಡಿದೆ. ಚೆನೈಯಿಂದ ಬಳ್ಳಾರಿಗೆ ಬೈಕ್‌ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.