

ಡೈಲಿ ವಾರ್ತೆ: 24/DEC/2025
ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಕಾಂಗ್ರೆಸ್ಗೆ ಭಾರಿ ಮುಖಭಂಗ, ಬಿಜೆಪಿಯದ್ದೇ ಪಾರುಪತ್ಯ

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ಗೆ ಭಾರಿ ಮುಖಭಂಗವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್, ಉತ್ತರ ಕನ್ನಡ ಜಿಲ್ಲೆಯ ಮಂಕಿ ಪಟ್ಟಣ ಪಂಚಾಯತ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತ್ಗಳಲ್ಲಿ ಬಿಜೆಪಿ ಬಹುಮತ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಮತ್ತು ರಾಯಚೂರು ಜಿಲ್ಲೆಯ ತುರವಿಹಾಳ ಪಟ್ಟಣ ಪಂಚಾಯತ್ಗಳ ತಲಾ 1 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿಯೂ ಬಿಜೆಪಿಗೆ ಗೆಲುವಿನ ನಗೆ ಬೀರಿದೆ.
ದಕ್ಷಿಣ ಕನ್ನಡದಲ್ಲಿ ಬಿಜೆಪಿ ಪ್ರಾಬಲ್ಯ: ಬಜಪೆ ಪಟ್ಟಣ ಪಂಚಾಯತ್‌ನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗೆದ್ದಿದ್ದು, ಕಾಂಗ್ರೆಸ್ ನಾಲ್ಕು ಸ್ಥಾನಗಳನ್ನು ಪಡೆದಿದೆ. SDPI ಮೂರು ಸ್ಥಾನ ಪಡೆದಿದ್ದರೆ, ಉಳಿದ ಒಂದು ಸ್ಥಾನ ಸ್ವತಂತ್ರ ಅಭ್ಯರ್ಥಿ ಪಾಲಾಗಿದೆ.
ಕಿನ್ನಿಗೋಳಿ ಪಟ್ಟಣ ಪಂಚಾಯತ್ನಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಪಡೆದಿವೆ. ಒಟ್ಟು 42 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದರು.
ಮೊದಲ ಚುನಾಣೆಯಲ್ಲೇ ಗೆದ್ದ BJP: ಮಂಕಿ ಪಟ್ಟಣ ಪಂಚಾಯತ್ ಆದ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬಂದಿತ್ತು. ಆದರೆ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದೆ. 12 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರ ಹಿಡಿದಿದ್ದರೆ, 8 ಸ್ಥಾನಗಳನ್ನು ಗೆಲ್ಲುವಲ್ಲಿ ಮಾತ್ರ ಕಾಂಗ್ರೆಸ್ ಸಫಲವಾಗಿದೆ.
ಬಾಶೆಟ್ಟಿಹಳ್ಳಿಯಲ್ಲಿ ಕೇಸರಿ ಪಡೆ ಕಮಾಲ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲೂ ಕಮಲ ಪಡೆ ಗೆದ್ದು ಬೀಗಿದೆ. 19 ಸ್ಥಾನಗಳ ಪೈಕಿ 14 ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. 11 ವರ್ಷಗಳ ಬಳಿಕ ನಡೆದ ಚುನಅವಣೆಯಲ್ಲಿ ಕೇಸರಿ ಪಡೆ ಕಮಾಲ್ ಮಾಡಿದೆ.