ಡೈಲಿ ವಾರ್ತೆ:JAN/13/2026

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ ನಲ್ಲಿ ವಿವೇಕಾನಂದ ಜಯಂತಿ ಆಚರಣೆ: ಯುವ ಮನಸ್ಸುಗಳಿಗೆ ಸ್ಪೂರ್ತಿ ತುಂಬಿದ ರಾಜೇಂದ್ರ ಭಟ್

ಕುಂದಾಪುರ: “ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಧನಾತ್ಮಕ ಮನೋಭಾವ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ. ಪ್ರತಿಯೊಬ್ಬರೂ ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ಅವುಗಳನ್ನು ನನಸಾಗಿಸುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಚರಿತ್ರೆಯಲ್ಲಿ ನೂರಕ್ಕೆ ನೂರು ಶೇಖಡಾ ಸಾಧನೆಗಳು ಸಾಧ್ಯವಾದದ್ದು ಪ್ರೇರಣೆ ಹಾಗೂ ಪ್ರೋತ್ಸಾಹದಿಂದ” ಎಂದು ರಾಷ್ಟ್ರ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಹೇಳಿದರು.

ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿಯ ಪ್ರಯುಕ್ತ ಜ. 12 ರಂದು ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್‌ ಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ “ ಹದಿಹರೆಯದವರ ಮನಸ್ಸುಗಳ ಸಬಲೀಕರಣ (ಎಂಪವರಿಂಗ್ ಯಂಗ್ ಮೈಂಡ್ಸ್) ಎಂಬ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಮಾತನಾಡಿ, “ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು. ಆಧುನಿಕ ಜೀವನದ ಸವಾಲುಗಳನ್ನು ಎದುರಿಸಲು ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ. ಇಂತಹ ಕಾರ್ಯಾಗಾರಗಳ ಮೂಲಕ ವಿದ್ಯಾರ್ಥಿಗಳ ಮಾನಸಿಕ ಸಾಮರ್ಥ್ಯ ವೃದ್ಧಿಸಲು ನಮ್ಮ ಸಂಸ್ಥೆ ಸದಾ ಬದ್ಧವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು,” ಎಂದರು.

ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಸುಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥ ವಿನಯ ಕುಮಾರ್ ಕೆ. ನಿರೂಪಿಸಿದರು.