ಡೈಲಿ ವಾರ್ತೆ:JAN/22/2026

ಪ್ರಚೋದನಾಕಾರಿ ಭಾಷಣ ಆರೋಪ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್‌ಐಆರ್ ದಾಖಲು

ಮಂಗಳೂರು: ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮತ್ತೆ ಎಫ್‌ಐಆರ್ ದಾಖಲಾಗಿದೆ.

ಜನವರಿ 12ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರು ವಿವಾದಾತ್ಮಕ ಮತ್ತು ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಪುತ್ತೂರು ನಿವಾಸಿ ಹಾಗೂ ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ಅವರು ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ದೂರು ಸಲ್ಲಿಸಿದ್ದರು.

ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿ ಬಿಎಮ್‌ಎಸ್‌ಎಸ್ 196, 299, 302, 353(2), 3(5) ಸೇರಿದಂತೆ ಹಲವು ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿತ ಭಾಷಣವು ಸಮಾಜದ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಅಶಾಂತಿಗೆ ಕಾರಣವಾಗುವಂತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣದಲ್ಲಿ ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ನೀಡಿದ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.