
ಡೈಲಿ ವಾರ್ತೆ:ಜನವರಿ/29/2026
ಕುಂದಾಪುರ – ಕೊಲ್ಲೂರು – ಬೈಂದೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ ಆಗ್ರಹ

ಬೈಂದೂರು: ಕುಂದಾಪುರದಿಂದ ಅಂತರಾಷ್ಟ್ರೀಯ ಖ್ಯಾತಿಯ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಕುಂದಾಪುರ–ಕೊಲ್ಲೂರು ಹಾಗೂ ಕೊಲ್ಲೂರು–ಬೈಂದೂರು ಮಾರ್ಗದಲ್ಲಿ ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರವನ್ನು ತಕ್ಷಣವೇ ಪ್ರಾರಂಭಿಸಬೇಕೆಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರಸ್ತುತ ಈ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ನಿಗದಿತ ವೇಳಾಪಟ್ಟಿಯಿಲ್ಲದೆ ಸಂಚರಿಸುತ್ತಿದ್ದು, ಜನಸಾಮಾನ್ಯರು, ಉದ್ಯೋಗಸ್ಥರು ಹಾಗೂ ಶಾಲಾ–ಕಾಲೇಜು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ಬಸ್‌ಗಳು ಲಭ್ಯವಿಲ್ಲದ ಕಾರಣ ಪ್ರಯಾಣಿಕರು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಅನಿವಾರ್ಯವಾಗಿ ಹೆಚ್ಚಿನ ಹಣ ನೀಡಿ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದೇಶ–ವಿದೇಶಗಳಿಂದ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಪುಣ್ಯಕ್ಷೇತ್ರವಾಗಿದ್ದು, ಇಲ್ಲಿಗೆ ಬರುವ ಭಕ್ತಾದಿಗಳಿಗೆ ವಿಶ್ವಾಸಾರ್ಹ ಹಾಗೂ ನಿಯಮಿತ ಸರ್ಕಾರಿ ಸಾರಿಗೆ ವ್ಯವಸ್ಥೆ ಅತ್ಯಗತ್ಯವಾಗಿದೆ. ಆದರೆ ಪ್ರಸ್ತುತ ಸಮರ್ಪಕ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದು ಕ್ಷೇತ್ರದ ಭಕ್ತರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕುಂದಾಪುರದಿಂದ ಕೊಲ್ಲೂರು ಹಾಗೂ ಬೈಂದೂರು–ಕೊಲ್ಲೂರು ಮಾರ್ಗಗಳಲ್ಲಿ ಹೆಚ್ಚಿನ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕೂಡಲೇ ನಿಯೋಜಿಸಬೇಕು. ಜನರಿಗೆ ಅನುಕೂಲವಾಗುವಂತೆ ಬೆಳಿಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೆ ಸರ್ಕಾರಿ ಬಸ್ ಸೇವೆಯ ಸೌಲಭ್ಯ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತವು ಈ ವಿಚಾರದಲ್ಲಿ ತಕ್ಷಣ ಮಧ್ಯಪ್ರವೇಶಿಸಿ ಜನರ ನ್ಯಾಯಸಮ್ಮತ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಮೋಹನ್ ಪೂಜಾರಿ ಅವರು ಎಚ್ಚರಿಕೆ ನೀಡಿದ್ದಾರೆ.