

ಡೈಲಿ ವಾರ್ತೆ: ಫೆ./06/2026


ನೆಲಮಂಗಲ ಬಳಿ ಭೀಕರ ಅಪಘಾತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – 40 ಮಂದಿ ಪಾರು

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾದ ಘಟನೆ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಸುಮಾರು 40 ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.
ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಬೆಳಿಗ್ಗೆ ಸುಮಾರು 3 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬಸ್‌ಗೆ ತಕ್ಷಣ ಬೆಂಕಿ ತಗುಲಿ ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದಿದೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ನಂತರ ನೆಲಮಂಗಲ ಸಂಚಾರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆಯ ವೇಳೆ ಬಸ್‌ನಲ್ಲಿ ಚಾಲಕರು ಸೇರಿದಂತೆ ಸುಮಾರು 40 ಮಂದಿ ಪ್ರಯಾಣಿಕರು ಇದ್ದು, ಸಮಯಕ್ಕೆ ಸರಿಯಾಗಿ ಬಸ್‌ನಿಂದ ಇಳಿದ ಕಾರಣ ಪ್ರಾಣಾಪಾಯ ತಪ್ಪಿದೆ. ಆದರೆ ಬಸ್‌ನ ಲಗೇಜ್ ಬಾಕ್ಸ್‌ನಲ್ಲಿ ಇಟ್ಟಿದ್ದ ಪ್ರಯಾಣಿಕರ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರು ಕಣ್ಣೀರಿಟ್ಟರು.
ಇತ್ತೀಚಿನ ದಿನಗಳಲ್ಲಿ ಖಾಸಗಿ ಬಸ್‌ಗಳಿಗೆ ಬೆಂಕಿ ತಗುಲುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್ ಅನಂತಪುರದ ಬಳಿ ಬೆಂಕಿಗೆ ಆಹುತಿಯಾಗಿದ್ದ ಘಟನೆ ನಡೆದಿದೆ. ಅದೇ ರೀತಿ, ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಬಸ್ ಬೆಂಕಿಗೆ ಆಹುತಿಯಾಗಿದ್ದ ಪ್ರಕರಣದಲ್ಲಿ ಪ್ರಾಣಹಾನಿಯೂ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳ ಸುರಕ್ಷತೆ ಕುರಿತು ಗಂಭೀರ ಚರ್ಚೆ ಅಗತ್ಯವಾಗಿದೆ.