

ಡೈಲಿ ವಾರ್ತೆ: ಫೆ./07/2026


ಕುಂದಾಪುರದ ರಾಜಕೀಯ ಹಾಗೂ ಸಾಮಾಜಿಕ ಧ್ರುವತಾರೆ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಕುಂದಾಪುರ, ಫೆ.07: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಅಸೌಖ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960ರಿಂದ 1983ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ್ದರು. ಬಳಿಕ 1983ರಿಂದ 1985ರ ವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿ ಜನಮಾನಸದಲ್ಲಿ ಗುರುತಿಸಿಕೊಂಡಿದ್ದರು.
ಸಾಮಾಜಿಕ ಕ್ಷೇತ್ರದಲ್ಲೂ ಅವರು ಸಕ್ರಿಯರಾಗಿದ್ದು, ತಾಲೂಕು ಸಹಕಾರಿ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್‌ನ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಧಾರ್ಮಿಕ ಕ್ಷೇತ್ರದಲ್ಲಿ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಯಾಗಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಭಕ್ತಾದಿಗಳ ಗೌರವಕ್ಕೆ ಪಾತ್ರರಾಗಿದ್ದರು.
ಅವರ ನಿಧನಕ್ಕೆ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ವಲಯದಲ್ಲಿ ಸಂತಾಪದ ಅಲೆ ಹರಡಿದ್ದು, ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.