

ಕೊಡಗು: ಎಸ್‌ಡಿಪಿಐ ರಾಜ್ಯಾಧ್ಯಕ್ಷರ ಕಾರಿಗೆ ಚಲಿಸುತ್ತಿದ್ದಾಗಲೇ ಬೆಂಕಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು
ಕೊಡಗು: ಕೊಡಗು ಜಿಲ್ಲೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದಿದೆ.
ಈ ಘಟನೆಯಲ್ಲಿ ಅದೃಷ್ಟವಶಾತ್ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಯಾವುದೇ ಅಪಾಯಕ್ಕೀಡಾಗದೆ ಪಾರಾಗಿದ್ದಾರೆ.
ಮಾಹಿತಿಯ ಪ್ರಕಾರ, ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ತಕ್ಷಣ ಅಬ್ದುಲ್ ಮಜೀದ್ ಹಾಗೂ ಚಾಲಕ ಕಾರಿನಿಂದ ಇಳಿದು ಸುರಕ್ಷಿತವಾಗಿ ಹೊರಬಂದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರಿನಾದ್ಯಂತ ವ್ಯಾಪಿಸಿ, ಕಾರು ಸಂಪೂರ್ಣವಾಗಿ ಸುಟ್ಟು ಕರಕಲುಗೊಂಡಿದೆ.
ಘಟನೆಯ ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ.
ಘಟನೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.