

ಡೈಲಿ ವಾರ್ತೆ: ಫೆ./20/2026

ಬಾಗಲಕೋಟೆ | ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಿಷೇಧಾಜ್ಞೆ ಜಾರಿ

ಬಾಗಲಕೋಟೆ, ಫೆ.20: ಶಿವಾಜಿ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪರಿಣಾಮ ನಗರದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಬಾಗಲಕೋಟೆಯಲ್ಲಿ ಸಂಭವಿಸಿದೆ.
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹಳೆ ಬಾಗಲಕೋಟೆ, ನವನಗರ ಹಾಗೂ ವಿದ್ಯಾಗಿರಿ ಪ್ರದೇಶಗಳಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಫೆಬ್ರವರಿ 19ರ ಮಧ್ಯರಾತ್ರಿಯಿಂದ ಫೆಬ್ರವರಿ 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕು ಮಂದಿಗಿಂತ ಹೆಚ್ಚು ಜನರು ಗುಂಪುಗೂಡುವುದಕ್ಕೆ ನಿರ್ಬಂಧ ಹೇರಲಾಗಿದ್ದು, ಅಪಾಯಕಾರಿ ಶಸ್ತ್ರಾಸ್ತ್ರಗಳನ್ನು ಹಿಡಿದು ಸಂಚರಿಸುವುದು, ಅನುಮತಿ ಇಲ್ಲದೇ ಸಭೆ-ಸಮಾರಂಭ, ಧರಣಿ ನಡೆಸುವುದು ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಕಟ್ಟುನಿಟ್ಟಿನ ನಿಷೇಧ ವಿಧಿಸಲಾಗಿದೆ.
ಕಿಲ್ಲಾ ಓಣಿ ಪ್ರದೇಶದಲ್ಲಿ ಮೆರವಣಿಗೆ ಮಸೀದಿ ಸಮೀಪ ಬಂದ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಪೊಲೀಸರ ಮೇಲೂ ಕಲ್ಲು ಬಿದ್ದಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೊಯಲ್ ಅವರ ಭುಜಕ್ಕೂ ಕಲ್ಲು ತಗುಲಿರುವ ಶಂಕೆ ವ್ಯಕ್ತವಾಗಿದೆ. ಅವರ ಬಟ್ಟೆಯ ಮೇಲೆ ರಕ್ತದ ಕಲೆ ಕಂಡುಬಂದಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆಗೆ ವಿರೋಧವಾಗಿ ಕೆಲ ಯುವಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರೂ, ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ವಶಪಡಿಸಿಕೊಂಡು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಕಲ್ಲು ತೂರಾಟ ನಡೆಸಿದವರನ್ನು ಬಂಧಿಸಬೇಕು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಕೆಲ ಹಿಂದೂ ಕಾರ್ಯಕರ್ತರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಸಿದ್ಧಾರ್ಥ ಗೋಯೆಲ್, “ಮಸೀದಿ ಭಾಗದ ಬಳಿ ಎರಡು ಕಲ್ಲುಗಳು ಬಿದ್ದಿವೆ. ಅದು ಪೊಲೀಸರ ಮೇಲಷ್ಟೇ ಬಿದ್ದಿದ್ದು, ಸಾರ್ವಜನಿಕರಿಗೆ ಹಾನಿಯಾಗಿಲ್ಲ. ಶೋಭಾಯಾತ್ರೆ ಆಗಮಿಸುವ ಮುನ್ನವೇ ಘಟನೆ ನಡೆದಿದೆ. ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ತಪ್ಪಿತಸ್ಥರನ್ನು ಗುರುತಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ನಗರದಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಇದು ಪೂರ್ವ ನಿಯೋಜಿತ ಕೃತ್ಯವೆಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿಲ್ಲ,” ಎಂದು ತಿಳಿಸಿದ್ದಾರೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಪಡೆಗಳು ಮೆರವಣಿಗೆ ಮಾರ್ಗ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಂಡಿದ್ದು, ಸಾರ್ವಜನಿಕರು ಶಾಂತಿ ಹಾಗೂ ಸಹಕಾರ ಕಾಪಾಡುವಂತೆ ಮನವಿ ಮಾಡಲಾಗಿದೆ.