

ಡೈಲಿ ವಾರ್ತೆ: ಫೆ./20/2026

ಬ್ರಹ್ಮರಕೂಟ್ಲು : ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಸಮಾಲೋಚನಾ ಸಭೆ, ಹೋರಾಟ ಸಮಿತಿ ಅಸ್ಥಿತ್ವಕ್ಕೆ, ಮಾರ್ಚ್ 3 ರಂದು ಟೋಲ್ ವಿರುದ್ಧ ಸಾಮೂಹಿಕ ಧರಣಿ

ಬಂಟ್ವಾಳ : ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ವಿನಲ್ಲಿ ಕಾರ್ಯಾಚರಿಸುತ್ತಿರುವ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಬಿ.ಸಿ.ರೋಡಿನಲ್ಲಿ ಸಮಾಲೋಚನಾ ಸಭೆ ನಡೆಯಿತು.

ಮಾಜಿ ಸಚಿವ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ಭಾಗವಹಿಸಿದ್ದರು.
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ನೀಡಿದರು.
“ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ” ರಚಿಸಿ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಹೋರಾಟ ಸಮಿತಿಗೆ
ಬಿ.ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನೂ ಸೇರಿಸಿಕೊಂಡು ಪೂರ್ಣಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.00 ರ ವರಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದು ಮತ್ತು ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರತರವಾದ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವು ಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆಯಲ್ಲಿ ಘೋಷಿಸಲಾಯಿತು.