ಡೈಲಿ ವಾರ್ತೆ: ಫೆ./26/2026

ಹಿರೇಹಳ್ಳಿ ಬಳಿ ಕಾರು,ಲಾರಿ ನಡುವೆ ಭೀಕರ ಅಪಘಾತ:
ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ಮೃತ್ಯು

ಚಿತ್ರದುರ್ಗ, ಫೆ.26: ಚಿತ್ರದುರ್ಗ ಜಿಲ್ಲೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅತಿವೇಗ ಹಾಗೂ ಚಾಲಕನ ಅಜಾಗರೂಕತೆಯಿಂದ ಕಾರು ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ (38), ಗಂಗಾಧರ್ (35) ಹಾಗೂ ಲೋಹಿತ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ತೀವ್ರತೆಯಿಂದ ಚಾಲಕನ ಪಕ್ಕದಲ್ಲಿ ಕುಳಿತಿದ್ದವರ ತಲೆ ಭಾಗಕ್ಕೆ ಗಂಭೀರ ಗಾಯವಾಗಿರುವುದು ತಿಳಿದುಬಂದಿದೆ.

ಇನ್ನು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.